Lokayukta Raid: ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
ಶಿವಮೊಗ್ಗ, ಬಳ್ಳಾರಿ ಮತ್ತು ಚಿತ್ರದುರ್ಗದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ತಂಡಗಳು ಇಂದು ಮುಂಜಾನೆಯೇ ಏಕಕಾಲಕ್ಕೆ ದಾಳಿ ನಡೆಸಿದ್ದು, ಭ್ರಷ್ಟಾಚಾರದ ಆರೋಪ ಹೊಂದಿರುವ ಅಧಿಕಾರಿಗಳ ಅಕ್ರಮ ಆಸ್ತಿಪಾಸ್ತಿಗಳ ಪರಿಶೀಲನೆಯನ್ನು ಮುಂದುವರಿಸಿದೆ. ಈ ಅಧಿಕಾರಿಗಳ ಮೇಲೆ ನಿರಂತರ ದೂರುಗಳಿದ್ದವು.
ಲೋಕಾಯುಕ್ತ -
ಬೆಂಗಳೂರು, ಏ.07 : ಕರ್ನಾಟಕದ (Karnataka) ವಿವಿಧ ಜಿಲ್ಲೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ (corruption) ಆರೋಪವುಳ್ಳ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಶಿವಮೊಗ್ಗ, ಬಳ್ಳಾರಿ ಮತ್ತು ಚಿತ್ರದುರ್ಗದ ಹಲವೆಡೆ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು, ಅಧಿಕಾರಿಗಳ ಅಕ್ರಮ ಆಸ್ತಿಪಾಸ್ತಿಗಳ ಪರಿಶೀಲನೆ ಮುಂದುವರಿದಿದೆ.
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್. ಅವರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಶಿವಮೊಗ್ಗ, ಶಿಕಾರಿಪುರ ಹಾಗೂ ಸಾಗರ ತಾಲೂಕಿನ ಒಟ್ಟು 5 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ. ಶಿಕಾರಿಪುರದ ಚೆನ್ನಕೇಶವ ನಗರದ ನಿವಾಸ ಹಾಗೂ ಸಾಗರದ ಅಚಾಪುರದಲ್ಲಿರುವ ಮನೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಕೇವಲ ಅಧಿಕಾರಿಯಷ್ಟೇ ಅಲ್ಲದೆ, ಅವರ ಆಪ್ತ ಸಹಾಯಕನ ಮನೆ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ. ದಾವಣಗೆರೆ ಲೋಕಾಯುಕ್ತ ಎಸ್‌ಪಿ ನೇತೃತ್ವದಲ್ಲಿ, ಶಿವಮೊಗ್ಗ, ಹಾವೇರಿ ಮತ್ತು ದಾವಣಗೆರೆಯ ಅಧಿಕಾರಿಗಳನ್ನೊಳಗೊಂಡ 5 ತಂಡಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿವೆ.
ಬಳ್ಳಾರಿ: ಬಳ್ಳಾರಿಯಲ್ಲಿ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಮೀನುಗಾರಿಕೆ ಇಲಾಖೆಯ ಅಧಿಕಾರಿಯನ್ನು ಲೋಕಾಯುಕ್ತರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಿವಣ್ಣ ಅವರ ಬಳ್ಳಾರಿಯ ಸಿದ್ಧಾರ್ಥ್ ನಗರದಲ್ಲಿರುವ ನಿವಾಸದ ಮೇಲೆ ದಾಳಿ ಮಾಡಲಾಗಿದ್ದು, ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳು ದಾಖಲೆಗಳನ್ನು ಜಾಲಾಡುತ್ತಿದ್ದಾರೆ. ಈ ಹಿಂದೆ ಶಿವಣ್ಣ ಅವರ ವಿರುದ್ಧ ಭ್ರಷ್ಟಾಚಾರ ಹಾಗೂ ಅಕ್ರಮ ಆಸ್ತಿ ಗಳಿಕೆ ಕುರಿತು ಸರಣಿ ದೂರುಗಳು ಕೇಳಿಬಂದಿದ್ದವು.
ಚಿತ್ರದುರ್ಗ: ಚಿತ್ರದುರ್ಗದಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಅವರ ನಿವಾಸಗಳ ಮೇಲೆ ದಾಳಿ ಮಾಡಲಾಗಿದೆ. ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಸುಶೀಲಮ್ಮ. ಇವರು ವರ್ಷದ ಹಿಂದಷ್ಟೇ ಸ್ವಯಂ ನಿವೃತ್ತಿ (VRS) ಪಡೆದಿದ್ದರು. ಚಿತ್ರದುರ್ಗದ ಮೇದೇಹಳ್ಳಿ ಬಡಾವಣೆಯ ನಿವಾಸ ಹಾಗೂ ಹಿರಿಯೂರು ತಾಲೂಕಿನ ಯಾದಲಘಟ್ಟ ಗ್ರಾಮದಲ್ಲಿರುವ ಅವರ ತೋಟದ ಮನೆ ಮೇಲೆ ದಾಳಿ ನಡೆಸಲಾಗಿದೆ.