ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ರಾಜ್ಯದ 5 ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ!

Lokayukta Raid: ರಾಜ್ಯದಲ್ಲಿ ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಸಿರುವ ಆರೋಪ ಎದುರಿಸುತ್ತಿರುವ ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬುಧವಾರ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ್ದಾರೆ. ಹಾಸನ, ಬಾಗಲಕೋಟೆ, ಬೀದರ್, ಚಿತ್ರದುರ್ಗ ಮತ್ತು ತುಮಕೂರು ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ.

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್;5 ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Nov 18, 2026 10:39 AM

ಬೆಂಗಳೂರು: ರಾಜ್ಯದಲ್ಲಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ (Disproportionate Assets) ಗಳಿಸಿರುವ ಆರೋಪ ಎದುರಿಸುತ್ತಿರುವ ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ (Lokayukta Raid) ಪೊಲೀಸರು ಬುಧವಾರ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ್ದಾರೆ. ಹಾಸನ, ಬಾಗಲಕೋಟೆ, ಬೀದರ್, ಚಿತ್ರದುರ್ಗ ಮತ್ತು ತುಮಕೂರು ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳ ತಂಡಗಳು, ಭ್ರಷ್ಟರ ಮನೆ ಹಾಗೂ ಕಚೇರಿಗಳಲ್ಲಿ ತೀವ್ರ ಶೋಧ ಕಾರ್ಯ ನಡೆಸುತ್ತಿವೆ.

ಸಾರ್ವಜನಿಕರಿಂದ ಬಂದ ದೂರುಗಳು ಹಾಗೂ ಖಚಿತ ಮಾಹಿತಿಯ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು, ಇಂದು ಮುಂಜಾನೆಯೇ ಅಧಿಕಾರಿಗಳ ನಿವಾಸ, ಕಚೇರಿ ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೆ ದಾಳಿ ಮಾಡಿ ಮಹತ್ವದ ದಾಖಲೆಗಳು, ನಗದು, ಚಿನ್ನಾಭರಣ ಹಾಗೂ ಬ್ಯಾಂಕ್ ವ್ಯವಹಾರಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಜಿಲ್ಲಾವಾರು ದಾಳಿಯ ಪ್ರಮುಖ ವಿವರಗಳು

ಹಾಸನ: ಅರಣ್ಯ ಇಲಾಖೆಯ ಅಧಿಕಾರಿ ಹೇಮಂತ್ ಕುಮಾರ್ ಅವರಿಗೆ ಸಂಬಂಧಿಸಿದ ಒಟ್ಟು ಐದು ಕಡೆಗಳಲ್ಲಿ ಲೋಕಾಯುಕ್ತ ಎಸ್‌ಪಿ ನಂದಿನಿ ಹಾಗೂ ಡಿವೈಎಸ್‌ಪಿ ಸುರೇಶ್ ನೇತೃತ್ವದ ತಂಡ ದಾಳಿ ನಡೆಸಿದೆ. ಹಾಸನ ನಗರದ ಚಿಕ್ಕ ಹೊನ್ನೇನಹಳ್ಳಿಯಲ್ಲಿರುವ ನಿವಾಸ, ಸಕಲೇಶಪುರದ ಬಾಡಿಗೆ ಮನೆ ಮತ್ತು ಕಚೇರಿ, ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿರುವ ಮಾವನ ಮನೆ ಹಾಗೂ ಅವರ ಆಪ್ತ ಗುತ್ತಿಗೆದಾರ ಹರೀಶ್ ಅವರ ಕುವೆಂಪು ನಗರದ ನಿವಾಸದ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

ಬಾಗಲಕೋಟೆ: ಈ ಹಿಂದೆ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಜಮಖಂಡಿ ತಾಲೂಕು ಪಂಚಾಯತ್‌ನ ಪಂಚಾಯತ್ ರಾಜ್ ವಿಭಾಗದ ಸಹಾಯಕ ನಿರ್ದೇಶಕ (AD) ಸಂಜೀವ (ಸಂಜು) ಹಿಪ್ಪರಗಿ ಅವರಿಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆದಿದೆ. ಬಾಗಲಕೋಟೆ ಲೋಕಾಯುಕ್ತ ಎಸ್‌ಪಿ ಮಹಾಲಿಂಗ ನಂದಗಾವಿ ಮಾರ್ಗದರ್ಶನದಲ್ಲಿ ಜಮಖಂಡಿ ನಗರದ ವಿಜಯನಗರ ಬಡಾವಣೆಯಲ್ಲಿರುವ ಮನೆ ಹಾಗೂ ಮೈಗೂರು ರಸ್ತೆಯಲ್ಲಿರುವ ಅವರ ತಂದೆಯ ನಿವಾಸದ ಮೇಲೆ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.

ಬೀದರ್: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ಬೀದರ್ ನಗರದ ಬ್ರಿಮ್ಸ್ (BRIMS) ನರ್ಸಿಂಗ್ ಕಾಲೇಜು ಪ್ರಾಂಶುಪಾಲ ರಾಜ್‌ಕುಮಾರ್ ಮಾಳಗೆ ಅವರಿಗೆ ಸೇರಿದ ಮನೆ, ಕಾಲೇಜು ಕಚೇರಿ ಹಾಗೂ ಶೆಡ್ ಸೇರಿದಂತೆ ಒಟ್ಟು ಐದು ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಚಿತ್ರದುರ್ಗ ಹಾಗೂ ತುಮಕೂರು: ಚಿತ್ರದುರ್ಗದಲ್ಲಿ ಸಶಸ್ತ್ರ ಮೀಸಲು ಪಡೆಯ (DAR) ಅಧಿಕಾರಿ ರವೀಂದ್ರ ಅವರ ನಿವಾಸದ ಮೇಲೆ ದಾಳಿ ನಡೆದಿದ್ದರೆ, ತುಮಕೂರಿನಲ್ಲಿ ತೂಕ ಮತ್ತು ಅಳತೆ ಇಲಾಖೆಯ ಇನ್ಸ್‌ಪೆಕ್ಟರ್ ಮನೆ ಮತ್ತು ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಆಸ್ತಿ-ಪಾಸ್ತಿ ದಾಖಲೆಗಳನ್ನು ಜಾಲಾಡುತ್ತಿದ್ದಾರೆ.