President Draupadi Murmu: ಮೈಸೂರಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಸಿಎಂ ಸಿದ್ದರಾಮಯ್ಯ ಸ್ವಾಗತ
Mysuru: ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉಪಸ್ಥಿತರಿದ್ದರು.

-

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರು ಇಂದು ಮೈಸೂರಿಗೆ (Mysuru) ಆಗಮಿಸಿದರು. ವಿವಿಧ ಕಾರ್ಯಕ್ರಮಗಳ ನಿಮಿತ್ತ ಮೈಸೂರಿಗೆ ಎರಡು ದಿನಗಳ ಪ್ರವಾಸವನ್ನು ಕೈಗೊಂಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ (CM Siddaramaiah) ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸಿಎಂ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉಪಸ್ಥಿತರಿದ್ದರು.
ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಆಯಿಷ್)ಯಲ್ಲಿ ನಡೆಯಲಿರುವ 60ನೇ ವರ್ಷದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ. ರಾಷ್ಟ್ರಪತಿ ಆಗಮನ ಹಿನ್ನೆಲೆಯಲ್ಲಿ ಸೋಮವಾರ ಮೈಸೂರಿನ ಆಯಿಷ್ (ಎಐಐಎಸ್‌ಹೆಚ್) ನಲ್ಲಿ ಯಾವುದೇ ಚಿಕಿತ್ಸಾ ಸೇವೆಗಳು ಲಭ್ಯವಿರುವುದಿಲ್ಲ. ಜೊತೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ರಾಷ್ಟ್ರಪತಿಗಳು ಸೆ.1 ರಂದು ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆಯಲಿದ್ದಾರೆ. ಸಂಜೆ ಚಾಮುಂಡಿ ಬೆಟ್ಟಕ್ಕೆ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8 ಗಂಟೆ ತನಕ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಹೇರಲಾಗಿದೆ. ಇದೇ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು ಅರಮನೆಗೆ ಭೇಟಿ ನೀಡಲಿದ್ದಾರೆ. ಭದ್ರತಾ ಹಿತದೃಷ್ಟಿಯಿಂದ ಹಾಗೂ ಶಿಷ್ಟಾಚಾರ ಪಾಲನೆಗಾಗಿ ಸೆ.2 ರಂದು 11.30ರ ವರಗೆ ಪ್ರವಾಸಿಗರಿಗೆ ಅರಮನೆಯ ಪ್ರವೇಶ, ವೀಕ್ಷಣೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಜೊತೆಗೆ ಸೆ.1ರಂದು ಮೈಸೂರು ಅರಮನೆ ಅವರಣದಲ್ಲಿ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: President Draupadi Murmu: ಸೆ.1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ