SSLC Exam: ಮಾ.18ರಿಂದ SSLC ಪರೀಕ್ಷೆ-1 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ
ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವಂತೆ ಹಾಗೂ ನಿಷೇಧಿತ ಪ್ರದೇಶದಲ್ಲಿ ಜೆರಾಕ್ಸ್ / ಸೈಬರ್/ ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚುವಂತೆ ಕೋರಲಾಗಿರುತ್ತದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆದೇಶ -
ಬೆಂಗಳೂರು, ಮಾ.14: 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1 (SSLC Exam) ಮಾರ್ಚ್ 18ರಿಂದ ಆರಂಭಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ (exam center) ಸುತ್ತಮುತ್ತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಬೆಂಗಳೂರು (bengaluru) ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.
ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ದಿನಾಂಕ: 18-03-2026 ರಿಂದ 02-04-2026 ರವರೆಗೆ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1 ಅನ್ನು ಬೆಂಗಳೂರು ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವಂತೆ ಹಾಗೂ ನಿಷೇಧಿತ ಪ್ರದೇಶದಲ್ಲಿ ಜೆರಾಕ್ಸ್ / ಸೈಬರ್/ ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚುವಂತೆ ಕೋರಲಾಗಿರುತ್ತದೆ ಎಂದಿದ್ದಾರೆ.
ಈ ವಿಷಯದ ಬಗ್ಗೆ ನಾನು ಖುದ್ದಾಗಿ ಮಾಡಿದ ವಿಚಾರಣೆಯಿಂದ ಮತ್ತು ಗುಪ್ತವಾರ್ತಾ ವರದಿಯಿಂದ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1 ಅನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶಕ್ಕೆ ಅನ್ವಯಿಸುವಂತೆ ನಿಷೇಧಾಜ್ಞೆ ಹೊರಡಿಸುವುದು ಅಗತ್ಯವಿರುವುದನ್ನು ಮನಗಂಡಿರುತ್ತೇನೆ ಎಂದು ತಿಳಿಸಿದ್ದಾರೆ.
ಈ ದಿಸೆಯಲ್ಲಿ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1 ಅನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ದೃಷ್ಟಿಯಿಂದ, ಸೀಮಾಂತ್ ಕುಮಾರ್ ಸಿಂಗ್, ಐ.ಪಿ.ಎಸ್, ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಆದ ನನಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಕಲಂ 163 ಪುಕರಣದ ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ: 18-03-2026 ರಿಂದ 02-04-2026 ರವರೆಗೆ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಅನ್ನು ನಡೆಯುವ ದಿನಗಳಂದು ಮತ್ತು ಪರೀಕ್ಷೆ ನಡೆಯುವ ಸಮಯದಲ್ಲಿ ಸದರಿ ಪರೀಕ್ಷೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜೆರಾಕ್ಸ್ / ಸೈಬರ್ / ಕಂಪ್ಯೂಟರ್ ಸೆಂಟರ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಿರುತ್ತೇನೆ ಅಂತ ತಿಳಿಸಿದ್ದಾರೆ.