ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸುಪ್ರೀಂ ಕೋರ್ಟ್‌ ಆದೇಶದ ಬೆನ್ನಲ್ಲೇ ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿ ವಿನಯ್‌ ಕುಲಕರ್ಣಿ; ಅವರ ಮುಂದಿರುವ ಆಯ್ಕೆಗಳೇನು?

Vinay Kulkarni: ಸುಮಾರು 10 ವರ್ಷಗಳ ಹಿಂದೆ ನಡೆದ ಧಾರವಾಡದ ಬಿಜೆಪಿ ಮುಖಂಡ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಅವರ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ 2 ವಾರಗಳಲ್ಲಿ ಶರಣಾಗುವಂತೆ ಸೂಚಿಸಿದೆ. ಇದರಿಂದ ಅವರ ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿ ಎದುರಾಗಿದೆ.

ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿ ವಿನಯ್‌ ಕುಲಕರ್ಣಿ

ವಿನಯ್‌ ಕುಲಕರ್ಣಿ (ಸಂಗ್ರಹ ಚಿತ್ರ) -

Ramesh Ballamoole
Ramesh Ballamoole Nov 25, 2026 7:23 PM

ಬೆಂಗಳೂರು, ನ. 25: ಸುಮಾರು 10 ವರ್ಷಗಳ ಹಿಂದೆ ನಡೆದ ಧಾರವಾಡದ ಬಿಜೆಪಿ ಮುಖಂಡ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ (Yogesh Gowda Murder Case) ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ, ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ (Vinay Kulkarni) ಅವರ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ 2 ವಾರಗಳಲ್ಲಿ ಶರಣಾಗುವಂತೆ ಸೂಚಿಸಿದೆ. ಸುಪ್ರೀಂ ಕೋರ್ಟ್‌ನ ಈ ಆದೇಶ ವಿನಯ್ ಕುಲಕರ್ಣಿಗೆ ತೀವ್ರ ಹಿನ್ನಡೆಯನ್ನು ಉಂಟು ಮಾಡಿದೆ. ಜಾಮೀನು ರದ್ದು ಹಿನ್ನೆಲೆಯಲ್ಲಿ ಮರುಪರಿಶೀಲನೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಆದರೆ, ಅದನ್ನು ನ್ಯಾಯಾಲಯ ಪರಿಗಣಿಸುವ ಸಾಧ್ಯತೆ ಕಡಿಮೆ ಇದೆ. ಹೀಗಾಗಿ ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ.

ಜಾಮೀನು ರದ್ದು ಹಿನ್ನೆಲೆಯಲ್ಲಿ ವಿನಯ್‌ ಮರುಪರಿಶೀಲನೆ ಅರ್ಜಿ ಸಲ್ಲಿಸಬಹುದು. ಅಲ್ಲದೆ ಹೈಕೋರ್ಟ್‌ನಲ್ಲಿ ವಿನಯ್ ಕುಲಕರ್ಣಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಅರ್ಜಿ ಬಾಕಿ ಇದೆ. ಹೀಗಾಗಿ ತರ್ತು ವಿಚಾರಣೆಗೆ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಬಹುದು. ಒಂದು ವೇಳೆ ಹೈಕೋರ್ಟ್ ತುರ್ತು ವಿಚಾರಣೆ ನಡೆಸಿ ತೀರ್ಪು ನೀಡಿ ಖುಲಾಸೆಗೊಳಿಸಿದರೆ ವಿನಯ್‌ಗೆ ರಿಲೀಫ್ ಸಿಗುವ ಸಾಧ್ಯತೆ ಇದೆ. ಒಂದು ವೇಳೆ ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಎತ್ತಿ ಹಿಡಿದರೆ ಸಂಕಷ್ಟ ತಪ್ಪಿದ್ದಲ್ಲ.

ಮಾಜಿ ಸಚಿವ ವಿನಯ್‌ ಕುಲಕರ್ಣಿ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್: 2 ವಾರಗಳಲ್ಲಿ ಶರಣಾಗಲು ಆದೇಶ

ಕಾನೂನು ಏನು ಹೇಳುತ್ತದೆ?

2 ವರ್ಷ ಜೈಲು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ತನ್ನಿಂದ ತಾನೆ ರದ್ದಾಗುತ್ತದೆ. ಕೆಲವು ತಿಂಗಳ ಹಿಂದೆ ವಿಶೇಷ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಯ ಆಧಾರದಲ್ಲಿ ವಿನಯ್ ಶಾಸಕ ಸ್ಥಾನ ಅನರ್ಹಗೊಂಡಿತ್ತು. ಆದರೆ ಹೈಕೋರ್ಟ್ ಶಿಕ್ಷೆಯನ್ನು ಅಮಾನತಿನಲ್ಲಿಟ್ಟ ಕಾರಣದಿಂದಾಗಿ ಶಾಸಕ ಸ್ಥಾನ ಮತ್ತೆ ಲಭಿಸಿತ್ತು. ಆದರೆ ಇದೀಗ ವಿಶೇಷ ನ್ಯಾಯಾಲಯದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿರುವುದು ಅವರಿಗೆ ನುಂಗಲಾರದ ತುತ್ತಾಗಿದೆ.

ಯಾವುದೇ ಶಾಸಕ ಅಥವಾ ಸಂಸದ ಕ್ರಿಮಿನಲ್ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿ ನ್ಯಾಯಾಲಯವು ಕನಿಷ್ಠ 2 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಜೈಲು ಶಿಕ್ಷೆ ವಿಧಿಸಿದರೆ ತಕ್ಷಣವೇ ತಮ್ಮ ಸ್ಥಾನದಿಂದ ಅನರ್ಹಗೊಳ್ಳುತ್ತಾರೆ. ಅಲ್ಲದೆ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾದ ದಿನದಿಂದ ಮುಂದಿನ 6 ವರ್ಷಗಳ ಕಾಲ ಅವರು ಯಾವುದೇ ಚುನಾವಣೆಗೆ ಸ್ಪರ್ಧಿಸುವಂತಿಲ್ಲ.

ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

ಏನಿದು ಘಟನೆ?

2016ರ ಜೂನ್‌ 15ರಂದು ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಜೆಪಿ ನಾಯಕ ಯೋಗೇಶ್‌ ಗೌಡ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ 2020ರ ನವೆಂಬರ್‌ 5ರಂದು ವಿನಯ್‌ ಕುಲಕರ್ಣಿಯನ್ನು ಸಿಬಿಐ ಬಂಧಿಸಿತ್ತು. 2021ರ ಆಗಸ್ಟ್‌ 11ರಂದು ಸುಪ್ರೀಂ ಕೋರ್ಟ್‌ ವಿನಯ್‌ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. 2025ರ ಜೂನ್‌ 7ರಂದು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಯುತ್ತಿರುವಾಗ ವಿನಯ್‌ ಕುಲಕರ್ಣಿ ಸಾಕ್ಷಿಗಳನ್ನು ಸಂಪರ್ಕಿಸಲು ಅಥವಾ ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ ಎಂಬುದಕ್ಕೆ ವಿಶ್ವಾಸಾರ್ಹ ಪುರಾವೆಗಳಿವೆ ಎಂದು ಹೇಳಿ ಜಾಮೀನು ರದ್ದುಗೊಳಿಸಿತ್ತು. ಬಳಿಕ ಅವರು ಕಾನೂನು ಹೋರಾಟ ಮುಂದುವರಿಸಿದ್ದರು.

ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.