ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Tumkur News: ಅಧಿಕಾರ ವಿಕೇಂದ್ರೀಕರಣದಿಂದ ಪಂಚಾಯಿತಿಗಳಲ್ಲಿ ಅಭಿವೃದ್ಧಿ: ಡಾ.ಜಿ.ಪರಮೇಶ್ವರ್

Tumkur News: ಜಿಲ್ಲೆಯಲ್ಲಿ 2023-24ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ ಸರ್ಕಾರ ನಿಗದಿಪಡಿಸಿದ್ದ 42 ಲಕ್ಷ ಮಾನವ ದಿನಗಳ ಸೃಜನೆಯ ಗುರಿಗೆ 63 ಲಕ್ಷ ಮಾನವ ದಿನಗಳನ್ನು ಸೃಜಿಸುವ ಮೂಲಕ ತುಮಕೂರು ಜಿಲ್ಲಾ ಪಂಚಾಯಿತಿಯು ನರೇಗಾ ಪ್ರಗತಿಯಲ್ಲಿ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಅಧಿಕಾರ ವಿಕೇಂದ್ರೀಕರಣದಿಂದ ಪಂಚಾಯಿತಿಗಳಲ್ಲಿ ಅಭಿವೃದ್ಧಿ: ಡಾ.ಜಿ.ಪರಮೇಶ್ವರ್

Profile Siddalinga Swamy May 17, 2025 9:10 PM

ತುಮಕೂರು: ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯಿಂದ ಪಂಚಾಯಿತಿಗಳಲ್ಲಿ ಅಭಿವೃದ್ಧಿ ಕಾಣಲು ಸಾಧ್ಯವಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು. ನಗರದ (Tumkur News) ಸಿದ್ಧಾರ್ಥ ನಗರದ ಎಚ್‌.ಎಂ. ಗಂಗಾಧರಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗಾಗಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿಗಳನ್ನು ಮತ್ತಷ್ಟು ಬಲಪಡಿಸಲು ಕಾರ್ಯಾಗಾರವನ್ನು ಏರ್ಪಡಿಸಲಾಗಿದ್ದು, ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ತೆರಿಗೆ ವಸೂಲಾತಿ, ಸ್ವಚ್ಛತೆ, ಮಹಿಳಾ ಸಬಲೀಕರಣ, ನಿವೇಶನ, ಮನೆ ಹಂಚಿಕೆ, ಆರ್ಥಿಕ ಶಿಸ್ತಿನ ನಿರ್ವಹಣೆ ಬಗ್ಗೆ ಈ ಕಾರ್ಯಾಗಾರದಲ್ಲಿ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ 2023-24ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ ಸರ್ಕಾರ ನಿಗದಿಪಡಿಸಿದ್ದ 42 ಲಕ್ಷ ಮಾನವ ದಿನಗಳ ಸೃಜನೆಯ ಗುರಿಗೆ 63 ಲಕ್ಷ ಮಾನವ ದಿನಗಳನ್ನು ಸೃಜಿಸುವ ಮೂಲಕ ತುಮಕೂರು ಜಿಲ್ಲಾ ಪಂಚಾಯಿತಿಯು ನರೇಗಾ ಪ್ರಗತಿಯಲ್ಲಿ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಈ ಯೋಜನೆಯಡಿ 650 ಕೋಟಿ ರೂ. ಗಳನ್ನು ವೆಚ್ಚ ಮಾಡಿ ಬಡವರಿಗೆ ಉದ್ಯೋಗ ಕಲ್ಪಿಸುವುದರೊಂದಿಗೆ ಮೂಲಸೌಕರ್ಯದ ಆಸ್ತಿಗಳನ್ನು ನಿರ್ಮಿಸಲಾಗಿದೆಯಲ್ಲದೆ ಈ ಯೋಜನೆಯಡಿ 122 ಕೋಟಿ ವೆಚ್ಚದಲ್ಲಿ ಶಾಲಾ ಕಟ್ಟಡ, ಶೌಚಾಲಯ, ಆಟದ ಮೈದಾನ, ಆವರಣ ಗೋಡೆ ನಿರ್ಮಾಣ ಮಾಡಿ ರಾಜ್ಯಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಗುಬ್ಬಿ, ತಿಪಟೂರು, ಚಿಕ್ಕನಾಯಕನಹಳ್ಳಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಸರ್ಕಾರ ಸಂಗ್ರಹಿಸಿರುವ ಸೆಸ್ ಹಣದಿಂದ ಜಿಲ್ಲೆಯ ಅಭಿವೃದ್ಧಿಗಾಗಿ 2,500 ಕೋಟಿ ರೂ.ಗಳ ಅನುದಾನ ಮಂಜೂರಾಗಿದೆ. ಇದರಲ್ಲಿ 132 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡವನ್ನು ನಿರ್ಮಿಸುವುದರೊಂದಿಗೆ 3 ತಾಲೂಕುಗಳನ್ನು ಮಾದರಿ ತಾಲೂಕುಗಳನ್ನಾಗಿ ರೂಪಿಸಲು ಯೋಜಿಸಲಾಗಿದೆ ಎಂದು ಹೇಳಿದರು.

ಶಾಸಕರಾದ ಸುರೇಶ್ ಗೌಡ, ಎಂ.ಟಿ. ಕೃಷ್ಣಪ್ಪ ಜಿಪಂ ಸಿಇಒ ಜಿ. ಪ್ರಭು ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಾಯಕಲ್ಪ ಪುಸ್ತಕ ಬಿಡುಗಡೆ ಮಾಡಲಾಯಿತು. ನರೇಗಾ ಯೋಜನೆಯಡಿ ಸಮಗ್ರ ಅಭಿವೃದ್ಧಿ ಕಾಮಗಾರಿ ಕೈಗೊಂಡ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ತೀರ್ಥಪುರ, ಗುಬ್ಬಿ ತಾಲೂಕು ಶಿವಪುರ, ಕೊರಟಗೆರೆ ತಾಲೂಕು ತುಂಬಾಡಿ, ಕುಣಿಗಲ್ ತಾಲೂಕು ನಿಡಸಾಲೆ, ಮಧುಗಿರಿ ತಾಲೂಕು ರಂಟವಳಲು, ಪಾವಗಡ ತಾಲೂಕು ಕೋಟಗುಡ್ಡ, ಶಿರಾ ತಾಲೂಕು ತಡಕಲೂರು, ತಿಪಟೂರು ತಾಲೂಕು ಸಾರ್ಥವಳ್ಳಿ, ತುಮಕೂರು ತಾಲೂಕು ಸಿರಿವರ ಹಾಗೂ ತುರುವೇಕೆರೆ ತಾಲೂಕು ಗೋಣಿತುಮಕೂರು ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸುದ್ದಿಯನ್ನೂ ಓದಿ | Karnataka Rains: ರಾಜ್ಯದಲ್ಲಿ ಮುಂದಿನ 4 ದಿನ ಭರ್ಜರಿ ಮಳೆ; ಯೆಲ್ಲೋ ಅಲರ್ಟ್‌ ಮುಂದುವರಿಕೆ

ಕಾರ್ಯಕ್ರಮದಲ್ಲಿ ತುಮುಲ್ ಅಧ್ಯಕ್ಷ ಹಾಗೂ ಪಾವಗಡ ಶಾಸಕ ಎಚ್.ವಿ. ವೆಂಕಟೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಹಾಗೂ ವಿವಿಧ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಒಗಳು ಉಪಸ್ಥಿತರಿದ್ದರು.