Hospet News: ಮೇ 20ರಂದು ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ; 2 ಲಕ್ಷ ಜನ ಸೇರುವ ನಿರೀಕ್ಷೆ
Hospet News: ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ರಾಜ್ಯ ಸರ್ಕಾರದ ಸಾಧನಾ ಸಮಾವೇಶದ ಬೃಹತ್ ವೇದಿಕೆ ಕಾರ್ಯಕ್ರಮ ಜರುಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕರ ಚಾಲನೆ ನೀಡಲಿದ್ದಾರೆ.


ಹೊಸಪೇಟೆ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರ ಎರಡು ವರ್ಷ ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಮೇ 20 ರಂದು ಹೊಸಪೇಟೆಯಲ್ಲಿ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಕ್ಫ್ ಮತ್ತು ವಸತಿ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸರ್ಕಾರದ ಎರಡನೇ ವರ್ಷದ ಸಾಧನೆ ಹಾಗೂ ಹಕ್ಕು ಪತ್ರ ವಿತರಣಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಬೃಹತ್ ವೇದಿಕೆ ಕಾರ್ಯಕ್ರಮ ಜರುಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯಸಭಾ ವಿರೋಧಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಅನೇಕ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ.
ಸಮಾವೇಶದಲ್ಲಿ ಸುಮಾರು 2 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಹಕ್ಕು ಪತ್ರ ವಿತರಣಾ ಫಲಾನುಭವಿಗಳು ಸೇರಿದಂತೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಗೆ ಜಿಲ್ಲಾಡಳಿತ ಸೂಕ್ತ ಕ್ರಮವಹಿಸಬೇಕು. ಎರಡು ಜಿಲ್ಲೆಯ ಜನರು ಆಗಮಿಸಲು ಅಂದಾಜು 2000 ಬಸ್‌ಗಳ ವ್ಯವಸ್ಥೆ ಕಲ್ಪಿಸಬೇಕು. ಬಿಸಿಲಿನ ತಾಪವನ್ನು ನೀಗಿಸಲು ಜನರಿಗೆ ನೆರಳಿನ ವ್ಯವಸ್ಥೆ, ಶೌಚಾಲಯ, ಶುದ್ಧ ಕುಡಿಯುವ ನೀರು, ನಂದಿನಿ ಮಜ್ಜಿಗೆ ವ್ಯವಸ್ಥೆ ಸೇರಿ ಊಟದ ವ್ಯವಸ್ಥೆ ಕಲ್ಪಿಸಬೇಕು. ಮುಖ್ಯವಾಗಿ ಟ್ರಾಫಿಕ್ ಜಾಮ್ ಆಗದಂತೆ ಪೊಲೀಸ್ ಇಲಾಖೆ ನಿಗಾವಹಿಸಬೇಕು. ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದರು.
ಈ ಸುದ್ದಿಯನ್ನೂ ಓದಿ | Pralhad Joshi: ಜಮೀರ್ ಬಾಂಬ್ ಬೆನ್ನಿಗೆ ಕಟ್ಟಿಕೊಂಡು ಪಾಕ್‌ಗೆ ಹೋಗಬೇಕಿಲ್ಲ.. ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ: ಜೋಶಿ
ಸಭೆಯಲ್ಲಿ ಸಂಸದ ಈ.ತುಕಾರಾಂ, ಹೊಸಪೇಟೆ ಶಾಸಕ ಎಚ್.ಆರ್. ಗವಿಯಪ್ಪ, ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ, ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ, ಕಂಪ್ಲಿ ಶಾಸಕ ಜೆ.ಗಣೇಶ್, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಸಂಡೂರು ಶಾಸಕಿ ಅನ್ನಪೂರ್ಣ ತುಕಾರಾಂ, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ, ಹುಡಾ ಅಧ್ಯಕ್ಷ ಎಚ್.ಎನ್.ಎಫ್.ಇಮಾಮ್ ನಿಯಾಜಿ, ಹೊಸಪೇಟೆ ಪಕ್ಷದ ಜಿಲ್ಲಾಧ್ಯಕ್ಷ ಸಿರಾಜ್ ಶೇಖ್, ಬಳ್ಳಾರಿ ಜಿಲ್ಲಾಧ್ಯಕ್ಷರಾದ ಅಲ್ಲಂ ಪ್ರಶಾಂತ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಪಂ ಸಿಇಒ ನೊಂಗ್ಜಾಯ್ ಮೊಹಮ್ಮದ್ ಅಕ್ರಮ್ ಅಲಿ ಷಾ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶ್ರೀಹರಿಬಾಬು ಬಿ.ಎಲ್, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಸಹಾಯಕ ಆಯುಕ್ತ ವಿವೇಕಾನಂದ, ತಹಸೀಲ್ದಾರ್ ಎಂ.ಶೃತಿ ಭಾಗವಹಿಸಿದ್ದರು.