Kannada New Movie: 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಿತ್ರದ ಟೈಟಲ್ ಸಾಂಗ್ ರಿಲೀಸ್; ಮುಖ್ಯಮಂತ್ರಿ ಸಾಥ್
Kannada New Movie: ಸಾಮಾಜಿಕ ಕಥಾಹಂದರವನ್ನು ಇಟ್ಟುಕೊಂಡು ತಯಾರಾಗಿರುವ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಿತ್ರ ಇದೀಗ ತೆರೆಗೆ ಬರಲು ಸಿದ್ಧವಾಗಿದೆ. ಈಗಾಗಲೇ ತನ್ನ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿರುವ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಿತ್ರದ ಶೀರ್ಷಿಕೆ ಗೀತೆಯನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಸರ್ಕಾರಿ ನ್ಯಾಯಬೆಲೆ ಅಂಗಡಿ -
ಸಾಮಾಜಿಕ ಕಥಾಹಂದರವನ್ನು ಇಟ್ಟುಕೊಂಡು ತಯಾರಾಗಿರುವ 'ಸರ್ಕಾರಿ ನ್ಯಾಯಬೆಲೆ ಅಂಗಡಿ' (Sarkari Nyaya Bele Angadi ) ಚಿತ್ರ ಇದೀಗ ತೆರೆಗೆ ಬರಲು ಸಿದ್ಧವಾಗಿದೆ. ಈಗಾಗಲೇ ತನ್ನ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿರುವ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) , 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಿತ್ರದ ಶೀರ್ಷಿಕೆ ಗೀತೆಯನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಸಿನಿಮಾದ ಹೆಸರೇ ಹೇಳುವಂತೆ, ಇದು 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಮತ್ತು ಪಡಿತರ ವ್ಯವಸ್ಥೆಯ ಸುತ್ತ ನಡೆಯುವಂಥ ಕಥಾಹಂದರದ ಚಿತ್ರ. ಪಕ್ಕಾ ಗ್ರಾಮೀಣ ಸೊಗಡಿನ ಕಥೆಯನ್ನು ಹೊಂದಿರುವ ಈ ಚಿತ್ರದ ಸಂಪೂರ್ಣ ಚಿತ್ರೀಕರಣವನ್ನು ಮಂಡ್ಯ ಜಿಲ್ಲೆಯಲ್ಲೇ ನಡೆಸಿರುವುದು ವಿಶೇಷ.
ಇದನ್ನೂ ಓದಿ: Vijay Deverakonda: ಹೊಸ ಸಿನಿಮಾ ಘೋಷಿಸಿದ ವಿಜಯ್ ದೇವರಕೊಂಡ
ಜಾಗೃತಿ ಮೂಡಿಸಿ, ಯಶಸ್ವಿಯಾಗಲಿ
'ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಿತ್ರದ ಶೀರ್ಷಿಕೆ ಗೀತೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಸಿನಿಮಾ ಎಂಬುದು ಬಹಳ ಪ್ರಭಾವಶಾಲಿ ಮಾಧ್ಯಮ. ಸಿನಿಮಾಗಳ ಮೂಲಕ ವಾಸ್ತವ ವಿಷಯಗಳನ್ನು ಬಹಳ ಬೇಗ ಜನರಿಗೆ ತಲುಪಿಸಬಹುದು. 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಸಿನಿಮಾ ವಾಸ್ತವ ಸ್ಥಿತಿಯನ್ನು ಕಥಾಹಂದರವಾಗಿ ಇಟ್ಟುಕೊಂಡು ತಯಾರಾಗಿರುವುದು ಶ್ಲಾಘನೀಯ.
ಜನ ಸಾಮಾನ್ಯರು, ಬಡವರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 'ಸರ್ಕಾರಿ ನ್ಯಾಯಬೆಲೆ ಅಂಗಡಿ'ಗಳ ಮೂಲಕ ದಿನಸಿ ಮತ್ತು ಆಹಾರವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ. ಆದರೆ, ಈ ವ್ಯವಸ್ಥೆಯಲ್ಲಿರುವ ಕೆಲವು ಲೋಪಗಳಿಂದ ಇದರ ಉದ್ದೇಶ ಪರಿಣಾಮಕಾರಿಯಾಗಿ ಈಡೇರುತ್ತಿಲ್ಲ. ಈಗ ಇದೇ ವಿಷಯವನ್ನು ಸಿನಿಮಾವಾಗಿಸಿ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಿತ್ರತಂಡ ಪ್ರೇಕ್ಷಕರ ಮುಂದೆ ಹೇಳಲು ಹೊರಟಿದೆ. ಈ ಚಿತ್ರ ಜನ ಜಾಗೃತಿ ಮೂಡಿಸಿ, ಯಶಸ್ವಿಯಾಗಲಿ' ಎಂದು ಶುಭ ಹಾರೈಸಿದರು.
ಪ್ರಮುಖ ಪಾತ್ರ
'ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರದಲ್ಲಿ ನಟ ಕುಮಾರ್ ಬಂಗಾರಪ್ಪ, ನಟಿ ರಾಗಿಣಿ ದ್ವಿವೇದಿ, ಹಿರಿಯ ನಟ ದೊಡ್ಡಣ್ಣ ಮುಂತಾದ ಅನೇಕ ಕಲಾವಿದರು ಇತರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
'ಜಯಶಂಕರ ಟಾಕೀಸ್ʼ ಬ್ಯಾನರಿನಲ್ಲಿ ನಿರ್ಮಾಣವಾಗುತ್ತಿರುವ 'ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರವನ್ನು ತೇಜು ಮೂರ್ತಿ ಮತ್ತು ಪದ್ಮಾವತಿ ಚಂದ್ರಶೇಖರ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಅನಂತ್ ಆರ್ಯನ್ ಸಂಗೀತ ಸಂಯೋಜಿಸುತ್ತಿದ್ದಾರೆ. ಬಿ. ರಾಮಮೂರ್ತಿ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯಿರುವ 'ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರಕ್ಕೆ ಸಾತ್ವಿಕ್ ಪವನ್ ಕುಮಾರ್ ಛಾಯಾಗ್ರಹಣ ಮತ್ತು ನಿರ್ದೇಶನ ಮಾಡುತ್ತಿದ್ದಾರೆ.
'ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ. ಹೆಚ್. ಮುನಿಯಪ್ಪ, ನಿರ್ಮಾಪಕರಾದ ಭಾ. ಮ. ಹರೀಶ್, ಭಾ. ಮ. ಗಿರೀಶ್, ಚೆಲುವ ಮೂರ್ತಿ, 'ಕರ್ನಾಟಕ ರಾಜ್ಯ ಪಡಿತರ ಸಂಘ'ದ ಅಧ್ಯಕ್ಷ ಕೃಷ್ಣಪ್ಪ ಸೇರಿದಂತೆ ಚಿತ್ರರಂಗ ಮತ್ತು ರಾಜಕೀಯರಂಗದ ಅನೇಕ ಗಣ್ಯರು ಹಾಜರಿದ್ದರು.
ಅಂದಹಾಗೆ, ಸುಮಾರು 52 ದಿನಗಳ ಕಾಲ ಮಂಡ್ಯ ಸುತ್ತಮುತ್ತಲಿನ ಸ್ಥಳಗಳಲ್ಲಿ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಿತ್ರದ ಚಿತ್ರೀಕರಣ ಮಾಡಲಾಗಿದೆ.
ಇದನ್ನೂ ಓದಿ: Hombale Films: ‘ಹೊಂಬಾಳೆ ಫಿಲ್ಮ್ಸ್’ನಿಂದ ಬಿಗ್ ಅಪ್‌ಡೇಟ್; ಈ ನೂತನ ಚಿತ್ರದ ಶೀರ್ಷಿಕೆ ನಾಳೆ ಅನಾವರಣ!
ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿರುವ ಚಿತ್ರ ತಂಡ, ಶ್ರೀಘ್ರದಲ್ಲೇ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಸಿನಿಮಾವನ್ನು ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದೆ. ಕನ್ನಡದ ಜೊತೆಗೆ ದೇಶದ ಇತರ ಭಾಷೆಗಳಲ್ಲೂ ಈ ಸಿನಿಮಾವನ್ನು ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.