5 ವಿಧಾನಸಭಾ, 1 ಲೋಕಸಭಾ ಕ್ಷೇತ್ರ: ಉಪಚುನಾವಣೆ ಫಲಿತಾಂಶ ಇಂದು ಘೋಷಣೆ
ತಮಿಳುನಾಡು, ಪಶ್ಚಿಮ ಬಂಗಾಳ, ಪುದುಚೇರಿಯ ವಿಧಾನಸಭಾ ಕ್ಷೇತ್ರಗಳು ಹಾಗೂ ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ಕಳೆದ ಅಕ್ಟೋಬರ್ 6 ರಂದು ಮತದಾನ ನಡೆದಿದ್ದು, ಇದರ ಫಲಿತಾಂಶಗಳು ರಾಜ್ಯ ರಾಜಕೀಯದಲ್ಲಿ ಸಕ್ರಿಯವಾಗಿರುವ ರಾಜಕೀಯ ಪಕ್ಷಗಳಿಗೆ ಮುಂದಿನ ಚುನಾವಣೆಯ ದಿಕ್ಸೂಚಿಯಾಗಲಿದೆ.
ಸಂಗ್ರಹ ಚಿತ್ರ -
ನವದೆಹಲಿ: ಕಳೆದ ಅಕ್ಟೋಬರ್ 6 ರಂದು ನಡೆದ ಐದು ವಿಧಾನಸಭಾ (Assembly) ಮತ್ತು ಒಂದು ಲೋಕಸಭಾ (Lok Sabha) ಕ್ಷೇತ್ರದ ಉಪಚುನಾವಣೆಯ (By election) ಮತದಾನದ ಫಲಿತಾಂಶ (Bypoll result) ಶುಕ್ರವಾರ ಸಂಜೆಯೊಳಗೆ ಹೊರಬೀಳಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮೊದಲು ಅಂಚೆ ಮತಪತ್ರಗಳನ್ನು ಬಳಿಕ ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ (EVM) ದಾಖಲಾದ ಮತಗಳನ್ನು ಎಣಿಕೆ ಕಾರ್ಯ ಮಾಡಲಾಗುತ್ತಿದೆ. ಈ ಚುನಾವಣೆಯ ಫಲಿತಾಂಶವು ಮುಂದಿನ ಚುನಾವಣೆಗಳಿಗೆ ದಿಕ್ಸೂಚಿಯಾಗಲಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.
ತಮಿಳುನಾಡು, ಪಶ್ಚಿಮ ಬಂಗಾಳ, ಪುದುಚೇರಿ ವಿಧಾನಸಭಾ ಕ್ಷೇತ್ರಗಳು ಹಾಗೂ ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರಕ್ಕೆ ಕಳೆದ ಅಕ್ಟೋಬರ್ 6ರಂದು ನಡೆದ ಉಪಚುನಾವಣೆಗಳ ಮತ ಎಣಿಕೆ ಶುಕ್ರವಾರ ಬೆಳಗ್ಗೆ ಆರಂಭವಾಗಿದೆ.
ತಮಿಳುನಾಡಿನ ನೂತನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ 'ತಮಿಳಗ ವೆಟ್ರಿ ಕಳಗಂ' ಸರ್ಕಾರಕ್ಕೆ ಮೊದಲ ಚುನಾವಣೆಯಾಗಿರುವ ಮಧುರಾಂತಕಂ ಮತ್ತು ಧರಾಪುರಂ ವಿಧಾನಸಭಾ ಕ್ಷೇತ್ರಗಳು ಪರಿಶಿಷ್ಟ ಜಾತಿಗಳಿಗೆ ಮೀಸಲಾಗಿತ್ತು. ಚುನಾವಣೆಗೂ ಮೊದಲು ಇಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಪ್ರಮುಖ ನಾಯಕರು ತೀವ್ರ ಪ್ರಚಾರ ನಡೆಸಿದ್ದರು. ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದ ಟಿವಿಕೆ ಪಕ್ಷಕ್ಕೆ ಈ ಎರಡು ಸ್ಥಾನಗಳಲ್ಲಿ ಗೆಲುವು ಪಡೆಯುವುದು ರಾಜಕೀಯವಾಗಿ ಅತ್ಯಂತ ಮಹತ್ವದ್ದಾಗಿದೆ.
ಇನ್ನು ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರ ಮತ್ತು ಮುರ್ಷಿದಾಬಾದ್ ಜಿಲ್ಲೆಯ ರೆಜಿನಗರ ಕ್ಷೇತ್ರದ ಮತ ಎಣಿಕೆ ಕಾರ್ಯ ಕೂಡ ಶುಕ್ರವಾರ ನಡೆಯಲಿದೆ.
ಮಮತಾ ಬ್ಯಾನರ್ಜಿ ನೇತೃತ್ವದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ಸಂಚಿತಾ ಪ್ರಧಾನ್ ಡೇ ಅವರು ಕೊನೆಯ ಕ್ಷಣದಲ್ಲಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದ ಬಳಿಕ ನಂದಿಗ್ರಾಮ ವಿಶೇಷ ಗಮನ ಸೆಳೆದಿದೆ. ಅವರ ಈ ನಿರ್ಧಾರವು ಬಿಜೆಪಿ ಅಭ್ಯರ್ಥಿ ಹಾಸಿ ರಾಣಿ ರಾಥ್ ಅವರ ಗೆಲುವಿನ ಸಾಧ್ಯತೆಯನ್ನು ಹೆಚ್ಚಿಸಿದೆ ಎನ್ನಲಾಗಿದೆ.
ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ
ಪುದುಚೇರಿಯ ತಟ್ಟಂಚಾವಡಿ ವಿಧಾನಸಭಾ ಕ್ಷೇತ್ರ ಮತ್ತು ಅಸ್ಸಾಂನ ನಾಗಾಂವ್ ಲೋಕಸಭಾ ಕ್ಷೇತ್ರಕ್ಕೂ ಮತ ಎಣಿಕೆ ಕಾರ್ಯ ಶುಕ್ರವಾರ ಬೆಳಗ್ಗೆಯಿಂದಲೇ ಪ್ರಾರಂಭವಾಗಿದೆ. ಈ ಕ್ಷೇತ್ರಗಳ ಫಲಿತಾಂಶಗಳು ಮುಂದಿನ ಚುನಾವಣೆಯ ಭವಿಷ್ಯವನ್ನು ನಿರ್ಧರಿಸಲಿವೆ ಎನ್ನುತ್ತಾರೆ ರಾಜಕೀಯ ತಜ್ಞರು.