ಅಮಿತ್ ಶಾ ಮಾನನಷ್ಟ ಪ್ರಕರಣ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್, ಕೋರ್ಟ್ನಿಂದ ಸಂಪೂರ್ಣ ಖುಲಾಸೆ
ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಆರು ವರ್ಷಗಳ ಹಳೆಯ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಶುಭಂ ವರ್ಮಾ ಅವರ ಪೀಠವು ಈ ಮಹತ್ವದ ತೀರ್ಪನ್ನು ಪ್ರಕಟಿಸಿದ್ದು, ತೀರ್ಪಿನ ವೇಳೆ ರಾಹುಲ್ ಗಾಂಧಿ ಅವರು ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಿದ್ದರು.
ಸಂಗ್ರಹ ಚಿತ್ರ -
ಲಖನೌ: ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಅವರಿಗೆ ಆರು ವರ್ಷಗಳ ಹಳೆಯ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಬಿಗ್ ರಿಲೀಫ್ ಸಿಕ್ಕಂತಾಗಿದೆ. 2018 ರಲ್ಲಿ ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಪ್ರಸ್ತುತ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Sha) ವಿರುದ್ಧ ನೀಡಿದ್ದರೆನ್ನಲಾದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ, ಉತ್ತರ ಪ್ರದೇಶದ ಸುಲ್ತಾನ್ಪುರದ ವಿಶೇಷ ಶಾಸಕರ- ಸಂಸದರ ನ್ಯಾಯಾಲಯವು ರಾಹುಲ್ ಗಾಂಧಿ ಅವರನ್ನು ಸಂಪೂರ್ಣವಾಗಿ ಖುಲಾಸೆಗೊಳಿಸಿದೆ.
ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಶುಭಂ ವರ್ಮಾ ಅವರ ಪೀಠವು ಈ ಮಹತ್ವದ ತೀರ್ಪನ್ನು ಪ್ರಕಟಿಸಿದ್ದು, ತೀರ್ಪಿನ ವೇಳೆ ರಾಹುಲ್ ಗಾಂಧಿ ಅವರು ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಿದ್ದರು. ನ್ಯಾಯಾಲಯವು ರಾಹುಲ್ ಗಾಂಧಿ ಅವರನ್ನು ದೋಷಮುಕ್ತಗೊಳಿಸುತ್ತಿದ್ದಂತೆ, ಕೋರ್ಟ್ ಆವರಣದ ಹೊರಗೆ ಜಮಾಯಿಸಿದ್ದ ನೂರಾರು ಕಾಂಗ್ರೆಸ್ ಕಾರ್ಯಕರ್ತರು 'ಸತ್ಯಮೇವ ಜಯತೇ' ಘೋಷಣೆಗಳನ್ನು ಕೂಗುತ್ತಾ, ಸಿಹಿ ಹಂಚಿ, ಡೋಲು ಬಾರಿಸಿ ವಿಜಯೋತ್ಸವ ಆಚರಿಸಿದ್ದಾರೆ.
ಏನಿದು ಪ್ರಕರಣ?
2018 ರ ಮೇ 8 ರಂದು ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಅವರು ಬಿಜೆಪಿ ಮತ್ತು ಅಮಿತ್ ಶಾ ವಿರುದ್ಧ ಗಂಭೀರ ವಾಗ್ದಾಳಿ ನಡೆಸಿದ್ದರು. "ಪ್ರಾಮಾಣಿಕತೆಯ ಬಗ್ಗೆ ಮಾತನಾಡುವ ಪಕ್ಷದ ಅಧ್ಯಕ್ಷರೇ ಕೊಲೆ ಆರೋಪಿಯಾಗಿದ್ದಾರೆ" ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಸೋಹ್ರಾಬುದ್ದೀನ್ ಶೇಖ್ ನಕಲಿ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಈ ಟೀಕೆ ಮಾಡಿದ್ದರು.
ರಾಹುಲ್ ಗಾಂಧಿ ಅವರ ಈ ಹೇಳಿಕೆಯಿಂದ ಬಿಜೆಪಿ ಮತ್ತು ಅದರ ಕಾರ್ಯಕರ್ತರ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಆರೋಪಿಸಿ, ಸುಲ್ತಾನ್ಪುರ ಜಿಲ್ಲಾ ಸಹಕಾರಿ ಬ್ಯಾಂಕ್ನ ಮಾಜಿ ಅಧ್ಯಕ್ಷ ಹಾಗೂ ಸ್ಥಳೀಯ ಬಿಜೆಪಿ ಮುಖಂಡ ವಿಜಯ್ ಮಿಶ್ರಾ ಅವರು 2018 ರ ಆಗಸ್ಟ್ 4 ರಂದು ಸುಲ್ತಾನ್ಪುರ ಕೋರ್ಟ್ನಲ್ಲಿ ಐಪಿಸಿ ಸೆಕ್ಷನ್ 499 ಮತ್ತು 500 ರ ಅಡಿಯಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ರಾಹುಲ್ ಗಾಂಧಿ ಬೆಂಗಾವಲು ವಾಹನಗಳ ನಡುವೆ ಅಪಘಾತ: ಕಾಂಗ್ರೆಸ್ ನಾಯಕನ ಆರೋಗ್ಯ ಹೇಗಿದೆ?
ಸುದೀರ್ಘ ವಿಚಾರಣೆಯ ಬಳಿಕ ತೀರ್ಪು ಪ್ರಕಟಿಸಿದ ನ್ಯಾಯಾಲಯವು ರಾಹುಲ್ ಗಾಂಧಿ ಅವರು ರಾಜಕೀಯ ರ್ಯಾಲಿಯಲ್ಲಿ ನೀಡಿದ ಹೇಳಿಕೆಯು ಕ್ರಿಮಿನಲ್ ಮಾನನಷ್ಟ ವ್ಯಾಪ್ತಿಗೆ ಬರುವುದಿಲ್ಲ ಹಾಗೂ ದೂರು ದಾಖಲಿಸಿದ ಬಿಜೆಪಿ ಮುಖಂಡ ವಿಜಯ್ ಮಿಶ್ರಾ ಅವರು ಈ ಪ್ರಕರಣದಿಂದ ನೇರವಾಗಿ ಬಾಧಿತರಾದ ವ್ಯಕ್ತಿಯಲ್ಲ ಎಂದು ಅಭಿಪ್ರಾಯಪಟ್ಟಿದೆ.