ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸಿಜೆಪಿ ಪ್ರತಿಭಟನೆಗೂ ಮುನ್ನ ಯೂಟ್ಯೂಬರ್ ಧ್ರುವ್ ರಾಠಿ ಬಂಧನ; ದೆಹಲಿಯಲ್ಲಿ ಹೆಚ್ಚಿದ ಭದ್ರತೆ

Dhruv Rathee: ದೆಹಲಿಯ ಜಂತರ್ ಮಂತರ್‌ನಲ್ಲಿ ನಿಗದಿಯಾಗಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆಗೂ ಮುನ್ನ, ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ದೆಹಲಿ ಮತ್ತು ಹರಿಯಾಣ ಪೊಲೀಸರ ಜಂಟಿ ತಂಡವು ಶನಿವಾರ ಮುಂಜಾನೆ ಗುರುಗ್ರಾಮದಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದಿದೆ ಎಂದು ತಿಳಿದು ಬಂದಿದೆ.

ಸಿಜೆಪಿ ಪ್ರತಿಭಟನೆಗೂ ಮುನ್ನ ಯೂಟ್ಯೂಬರ್ ಧ್ರುವ್ ರಾಠಿ ಬಂಧನ

ಧ್ರುವ್‌ ರಾಠೀ -

Vishakha Bhat Heggar
Vishakha Bhat Heggar Oct 10, 2026 10:32 AM

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಿಗದಿಯಾಗಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆಗೂ ಮುನ್ನ, ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ (Dhruv Rathee) ಅವರನ್ನು ದೆಹಲಿ ಮತ್ತು ಹರಿಯಾಣ ಪೊಲೀಸರ ಜಂಟಿ ತಂಡವು ಶನಿವಾರ ಮುಂಜಾನೆ ಗುರುಗ್ರಾಮದಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದಿದೆ ಎಂದು ತಿಳಿದು ಬಂದಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆ ಒತ್ತಾಯಿಸಿ ನಡೆಯುತ್ತಿರುವ ಈ ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಈ ಬಂಧನ ಪ್ರಕ್ರಿಯೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದಷ್ಟೇ ಜರ್ಮನಿಯಿಂದ ಭಾರತಕ್ಕೆ ಮರಳಿದ್ದ ಧ್ರುವ್ ರಾಠಿ ಅವರು ಗುರುಗ್ರಾಮದ ಸೆಕ್ಟರ್ 56 ರಲ್ಲಿರುವ ಕೇಂದ್ರೀಯ ವಿಹಾರ್ ಸೊಸೈಟಿಯ ನಿವಾಸದಲ್ಲಿದ್ದರು. ಶನಿವಾರ ಮುಂಜಾನೆ ಸುಮಾರು 7:48 ಕ್ಕೆ ಧ್ರುವ್ ರಾಠಿ ಅವರ ನಿವಾಸಕ್ಕೆ ಆಗಮಿಸಿದ ಪೊಲೀಸರು ಅವರನ್ನು ವಶಕ್ಕೆ ಪಡೆದರು. ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರತಿಭಟನೆಗೆ ಅನುಮತಿ ಇಲ್ಲದ ಕಾರಣ ದೆಹಲಿಗೆ ಪ್ರಯಾಣಿಸದಂತೆ ಪೊಲೀಸರು ಧ್ರುವ್ ರಾಠಿ ಅವರಿಗೆ ಮುಂಚಿತವಾಗಿ ಸೂಚನೆ ನೀಡಿದ್ದರು. ಆದರೆ, ರಾಠಿ ಅವರು ಈ ಸೂಚನೆಯನ್ನು ನಿರಾಕರಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲು ಸಿದ್ಧರಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಸಿಜೆಪಿ ಪ್ರತಿಭಟನೆಗೆ ಅನುಮತಿ ನಿರಾಕರಣೆ: ದೆಹಲಿಯಲ್ಲಿ ಹೈ ಅಲರ್ಟ್, 57 ಮೆಟ್ರೋ ನಿಲ್ದಾಣ ಬಂದ್

ಧ್ರುವ್ ರಾಠಿ ಅಕ್ಟೋಬರ್ 8 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದಿದ್ದ ಸಿಜೆಪಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಆನಂತರ, ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ರ್ಯಾಲಿಯಲ್ಲೂ ತಾನು ಭಾಗವಹಿಸುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗವಾಗಿ ಘೋಷಿಸಿದ್ದರು.

ಧ್ರುವ್ ರಾಠಿ ಅವರ ಬಂಧನದ ಹೊರತಾಗಿಯೂ ದೆಹಲಿಯ ಜಂತರ್ ಮಂತರ್‌ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪ್ರತಿಭಟನಾಕಾರರು ಜಮಾಯಿಸದಂತೆ ತಡೆಯಲು ಇಡೀ ಪ್ರದೇಶದಲ್ಲಿ ಭಾರಿ ಪೊಲೀಸ್ ಭದ್ರತೆ ಹಾಗೂ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಆದಾಗ್ಯೂ, ಪ್ರತಿಭಟನೆಗೆ ಯತ್ನಿಸಿದ ಸಿಜೆಪಿ ಪಕ್ಷದ ಸುಮಾರು 150 ಕ್ಕೂ ಹೆಚ್ಚು ಕಾರ್ಯಕರ್ತರನ್ನು ದೆಹಲಿಯ ವಿವಿಧ ಭಾಗಗಳಲ್ಲಿ ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ.