Karnataka Cabinet expansion: ಹಾವೇರಿ ಶಾಸಕ ರುದ್ರಪ್ಪ ಲಮಾಣಿಗೆ ಎರಡನೇ ಬಾರಿಗೆ ಒಲಿದು ಬಂದ ಸಚಿವ ಸ್ಥಾನ
Rudrappa Lamani: ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಎರಡನೇ ಬಾರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಅವರು ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದು, ಶಿಕ್ಷಣ, ನೀರಾವರಿ, ಮೂಲಸೌಕರ್ಯ ಹಾಗೂ ಸಾಮಾಜಿಕ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿದ್ದಾರೆ.
ಕರ್ನಾಟಕ ವಿಧಾನಸಭೆಯ ಉಪ ಸಭಾಧ್ಯಕ್ಷ ಹಾಗೂ ಹಾವೇರಿ ಶಾಸಕ ರುದ್ರಪ್ಪ ಮಾನಪ್ಪ ಲಮಾಣಿ (ಸಂಗ್ರಹ ಚಿತ್ರ) -
ಹಾವೇರಿ, ಆ.03: ವಿಧಾನಸಭೆ ಉಪ ಸಭಾಧ್ಯಕ್ಷ ಹಾಗೂ ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕ ರುದ್ರಪ್ಪ ಮಾನಪ್ಪ ಲಮಾಣಿ (Rudrappa Lamani) ಅವರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದು, ಶಿಕ್ಷಣ, ನೀರಾವರಿ, ಮೂಲಸೌಕರ್ಯ ಹಾಗೂ ಸಾಮಾಜಿಕ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿದ್ದಾರೆ. ರುದ್ರಪ್ಪ ಲಮಾಣಿ ಅವರಿಗೆ ಎರಡನೇ ಬಾರಿಗೆ ಸಚಿವ ಸ್ಥಾನ ಒಲಿದು ಬಂದಿದೆ.
ರಾಜಕೀಯ ಪಯಣ
1980ರಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದ ಅವರು, 1994ರಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸದಸ್ಯರಾಗಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದರು. ಗದಗ ಜಿಲ್ಲೆಯ ಕಾಂಗ್ರೆಸ್ ಚುನಾವಣಾ ಅಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಚುನಾಯಿತ ಪ್ರತಿನಿಧಿಯಾಗಿ ಸೇವೆ
1987ರಿಂದ 1992ರವರೆಗೆ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ ಬಳಿಕ 1999ರಲ್ಲಿ ಬ್ಯಾಡಗಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. ನಂತರ 2013ರಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದಿಂದ ಸುಮಾರು 32 ಸಾವಿರ ಮತಗಳ ದಾಖಲೆಯ ಅಂತರದಲ್ಲಿ ಗೆದ್ದು ಶಾಸಕರಾದರು. 2023ರ ಚುನಾವಣೆಯಲ್ಲಿಯೂ ಮರು ಆಯ್ಕೆಯಾಗಿ ಪ್ರಸ್ತುತ ಹಾವೇರಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಡಿ ಕೆ ಶಿವಕುಮಾರ್ ಸಂಪುಟದ ಸಚಿವರ ಲಿಸ್ಟ್ ಫೈನಲ್; ಯಾರಿಗೆಲ್ಲ ಇದೆ ಸ್ಥಾನ?
ಸಚಿವರಾಗಿ ಆಡಳಿತ ಅನುಭವ
2016ರಿಂದ 2018ರವರೆಗೆ ಕರ್ನಾಟಕ ಸರ್ಕಾರದಲ್ಲಿ ಜವಳಿ ಮತ್ತು ಮುಜರಾಯಿ ಸಚಿವರಾಗಿ ಕಾರ್ಯನಿರ್ವಹಿಸಿದರು. ಇದೇ ಅವಧಿಯಲ್ಲಿ ಹಾವೇರಿ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ವೇಗ ನೀಡಿದರು.
2023ರ ಜುಲೈ 6ರಂದು ಕರ್ನಾಟಕ ವಿಧಾನಸಭೆಯ ಉಪ ಸಭಾಧ್ಯಕ್ಷರಾಗಿ ಆಯ್ಕೆಯಾದ ಅವರು, ಸದನದ ಕಾರ್ಯನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಜತೆಗೆ ಅರ್ಜಿಗಳ ಸಮಿತಿ, ವಸತಿ ಸೌಲಭ್ಯಗಳ ಸಮಿತಿ ಹಾಗೂ ಖಾಸಗಿ ಸದಸ್ಯರ ಮಸೂದೆಗಳ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ಅಭಿವೃದ್ಧಿ ಕಾರ್ಯಗಳ ಪ್ರಮುಖ ಸಾಧನೆಗಳು
ಕುಡಿಯುವ ನೀರು ಮತ್ತು ನೀರಾವರಿ: ಬ್ಯಾಡಗಿ ಹಾಗೂ ರಾಣೆಬೆನ್ನೂರು ತಾಲೂಕಿನ ಹಲವು ಗ್ರಾಮಗಳಿಗೆ ತುಂಗಭದ್ರಾ ನದಿಯಿಂದ ಕುಡಿಯುವ ನೀರು ಒದಗಿಸುವ ಯೋಜನೆ ಜಾರಿಗೊಳಿಸಿದರು. ಗುಡ್ಡದಮಲ್ಲಾಪುರ ಸೇರಿದಂತೆ ಸುಮಾರು 13 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆ ಅನುಷ್ಠಾನಗೊಳಿಸಿದರು. ಸವಣೂರು ಏತ ನೀರಾವರಿ ಯೋಜನೆ ಮೂಲಕ ಸುಮಾರು ₹690 ಕೋಟಿ ವೆಚ್ಚದಲ್ಲಿ 15,500 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ವ್ಯವಸ್ಥೆ ಕಲ್ಪಿಸಿದರು. ಹಾವೇರಿ ನಗರದಲ್ಲಿ 24×7 ಕುಡಿಯುವ ನೀರಿನ ಯೋಜನೆಗೆ ಸುಮಾರು ₹59.92 ಕೋಟಿ ವೆಚ್ಚದ ಕಾಮಗಾರಿ ಪ್ರಗತಿಯಲ್ಲಿದೆ.
ರೈತರ ಪರ ಕೆಲಸ: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯ ಅಭಿವೃದ್ಧಿಗೆ ಮೂಲಸೌಕರ್ಯ ಒದಗಿಸಿ ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ ಒಂದಾಗಿ ಬೆಳೆಸಲು ಶ್ರಮಿಸಿದರು. ಮೆಣಸಿನ ಬೀಜಗಳ ಮೇಲಿನ ತೆರಿಗೆ ಹಿಂಪಡೆಯುವಂತೆ ಸರ್ಕಾರದ ಗಮನ ಸೆಳೆದರು. ಸಕ್ಕರೆ ಕಾರ್ಖಾನೆ ಮತ್ತು ಕಬ್ಬು ಬೆಳೆಗಾರರ ನಡುವಿನ ಸಮಸ್ಯೆಗಳನ್ನು ಬಗೆಹರಿಸಲು ಮಧ್ಯಸ್ಥಿಕೆ ವಹಿಸಿದರು.
ಮೂಲಸೌಕರ್ಯ ಅಭಿವೃದ್ಧಿ: ಹಾವೇರಿ ಜಿಲ್ಲೆಯಲ್ಲಿ ಹೊಸ ಬಸ್ ನಿಲ್ದಾಣ ನಿರ್ಮಾಣಕ್ಕೆ ಸಹಕರಿಸಿದರು. ರಸ್ತೆ, ಸೇತುವೆ, ಚರಂಡಿ, ಮಾರುಕಟ್ಟೆ ಆವರಣ, ಸರ್ಕಾರಿ ಕಚೇರಿ ಹಾಗೂ ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಠಾನಗೊಳಿಸಿದರು. ವಿವಿಧ ಗ್ರಾಮಗಳನ್ನು ಮಾದರಿ ಗ್ರಾಮಗಳಾಗಿ ರೂಪಿಸುವ ಯೋಜನೆಗಳಿಗೆ ಚಾಲನೆ ನೀಡಿದರು.
ವಸತಿ ಮತ್ತು ಶಿಕ್ಷಣ: ಇಂದಿರಾ ಆವಾಸ್, ಬಸವ ವಸತಿ ಸೇರಿದಂತೆ ವಿವಿಧ ಯೋಜನೆಗಳಡಿ 4,966 ಮನೆಗಳನ್ನು ನಿರ್ಮಿಸಿ ವಸತಿ ಸೌಲಭ್ಯ ಕಲ್ಪಿಸಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ನಿಲಯಗಳನ್ನು ನಿರ್ಮಿಸಿದರು. ಪ್ರಾಥಮಿಕ ಶಾಲೆಯಿಂದ ಪದವಿ ಕಾಲೇಜುಗಳವರೆಗೆ 11ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳ ಸ್ಥಾಪನೆಗೆ ಮುನ್ನಡೆ ನೀಡಿದರು.
ಮುಜರಾಯಿ ಸಚಿವರಾಗಿ: ಹೊಸ ದೇವಾಲಯಗಳ ನಿರ್ಮಾಣ, ಪುರಾತನ ದೇವಾಲಯಗಳ ಪುನರುಜ್ಜೀವನಕ್ಕೆ ಕ್ರಮ ಕೈಗೊಂಡರು. ದೇಶದ ಪ್ರಮುಖ ತೀರ್ಥಕ್ಷೇತ್ರಗಳಲ್ಲಿ ಕರ್ನಾಟಕ ಭವನಗಳ ನಿರ್ಮಾಣಕ್ಕೆ ಮುಂದಾದರು.
ಬಂಜಾರ ಸಮುದಾಯಕ್ಕಾಗಿ: ಸಂತ ಶ್ರೀ ಸೇವಾಲಾಲ್ ಜನ್ಮಸ್ಥಳ ಪ್ರತಿಷ್ಠಾನದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಂಜಾರ ಭಾಷೆಗೆ ಸಂವಿಧಾನಾತ್ಮಕ ಮಾನ್ಯತೆ, ಲಿಪಿ ಹಾಗೂ ಶಾಸನಬದ್ಧ ಸ್ಥಾನಮಾನಕ್ಕಾಗಿ ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.
ಜನಸೇವೆಗೆ ಆದ್ಯತೆ: ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಹಿಂದುಳಿದ ವರ್ಗಗಳ ಅಭಿವೃದ್ಧಿ, ಸಾಮಾಜಿಕ ಕಲ್ಯಾಣ, ಗ್ರಾಮೀಣ ಮೂಲಸೌಕರ್ಯ ಮತ್ತು ಯುವಕರಿಗೆ ಅವಕಾಶ ಕಲ್ಪಿಸುವ ಕೆಲಸಗಳಿಗೆ ರುದ್ರಪ್ಪ ಲಮಾಣಿ ಅವರು ಹೆಚ್ಚಿನ ಆದ್ಯತೆ ನೀಡಿದ್ದಾರೆ. ತಮ್ಮ ಶಾಸಕತ್ವದ ಅವಧಿಯಲ್ಲಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ತಂದು ವಿವಿಧ ಕಾಮಗಾರಿಗಳನ್ನು ಜಾರಿಗೊಳಿಸಿರುವುದು ಅವರ ಪ್ರಮುಖ ಸಾಧನೆಗಳಲ್ಲೊಂದು.
ಬೆಂಗಳೂರಿಗರೇ ಗಮನಿಸಿ; ಲೋಕಭವನದಲ್ಲಿ ಸಚಿವರ ಪ್ರಮಾಣವಚನ, ಹಲವೆಡೆ ಸಂಚಾರ ನಿರ್ಬಂಧ
ರುದ್ರಪ್ಪ ಲಮಾಣಿ ಅವರು ಜಿಲ್ಲಾ ಪಂಚಾಯಿತಿ ಸದಸ್ಯರಿಂದ ಆರಂಭಿಸಿ ಶಾಸಕ, ಸಚಿವ ಹಾಗೂ ಕರ್ನಾಟಕ ವಿಧಾನಸಭೆಯ ಉಪ ಸಭಾಧ್ಯಕ್ಷರ ಹುದ್ದೆಯವರೆಗೆ ಬೆಳೆದಿರುವ ಅನುಭವಿ ರಾಜಕಾರಣಿಯಾಗಿದ್ದಾರೆ. ಶಿಕ್ಷಣ, ನೀರಾವರಿ, ರೈತರ ಕಲ್ಯಾಣ, ಮೂಲಸೌಕರ್ಯ ಹಾಗೂ ಸಾಮಾಜಿಕ ಅಭಿವೃದ್ಧಿಗೆ ನೀಡಿದ ಕೊಡುಗೆಗಳಿಂದ ಹಾವೇರಿ ಜಿಲ್ಲೆಯ ಅಭಿವೃದ್ಧಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.