ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ; ಗೌರವಧನ ಹೆಚ್ಚಳ ಪರಿಶೀಲಿಸಲು ಸಮಿತಿ ರಚನೆ
Asha workers protest: ಆರೋಗ್ಯ ಸಚಿವ ಖಾದರ್ ಅವರ ಸೂಚನೆ ಮೇರೆಗೆ ಸಮಿತಿ ರಚನೆಯಾಗಿದ್ದು, ಆಶಾ ಕಾರ್ಯಕರ್ತೆಯರು ನಿರ್ವಹಿಸುವ ಕೆಲಸಕ್ಕೆ ಅನುಗುಣವಾಗಿ ಗೌರವಧನ ಹೆಚ್ಚಳ ಮಾಡುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆದಿದೆ ಎಂದು ತಿಳಿದುಬಂದಿದೆ.
-
ಬೆಂಗಳೂರು: ಗೌರವಧನ 15 ಸಾವಿರ ರೂ.ಗಳಿಗೆ ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿಷ್ಟಾವಧಿ ಪ್ರತಿಭಟನೆ (Asha workers protest) ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಆರೋಗ್ಯ ಇಲಾಖೆ ಸ್ಪಂದಿಸಿದೆ. ಆಶಾ ಕಾರ್ಯಕರ್ತೆಯರ ಬೇಡಿಕೆ ಕುರಿತು ಪರಿಶೀಲನೆ ನಡೆಸಲು ಅಧಿಕಾರಿಗಳ ಸಮಿತಿ ರಚಿಸಲಾಗಿದೆ. ಆರೋಗ್ಯ ಸಚಿವ ಖಾದರ್ ಅವರ ಸೂಚನೆ ಮೇರೆಗೆ ಸಮಿತಿ ರಚನೆಯಾಗಿದ್ದು, ಆಶಾ ಕಾರ್ಯಕರ್ತೆಯರು ನಿರ್ವಹಿಸುವ ಕೆಲಸಕ್ಕೆ ಅನುಗುಣವಾಗಿ ಗೌರವಧನ ಹೆಚ್ಚಳ ಮಾಡುವ ಕುರಿತು ಚಿಂತನೆ ನಡೆದಿದೆ.
ಕೆಲಸಕ್ಕೆ ತಕ್ಕಂತೆ ವೇತನ ನೀಡಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ. ಎಲ್ಲಾ ಆಶಾ ಕಾರ್ಯಕರ್ತೆಯರ ಇನ್ಸೆಂಟೀವ್ ಹೆಚ್ಚಳದ ಸಾಧ್ಯತೆಗಳನ್ನೂ ಸಮಿತಿ ಪರಿಶೀಲಿಸಲಿದೆ ಎಂದು ತಿಳಿದುಬಂದಿದೆ.
ಇನ್ನು ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘಟನೆಯ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಪ್ರಧಾನ ಸಲಹೆಗಾರ ಜಿ.ಸಿ. ಚಂದ್ರಶೇಖರ್ ಅವರೊಂದಿಗೆ ಸಭೆ ನಡೆಸಲಾಗಿದೆ. ಸಭೆಯಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನು 15 ಸಾವಿರ ರೂಪಾಯಿಗೆ ಹೆಚ್ಚಿಸುವಂತೆ ಲಿಖಿತವಾಗಿ ಮನವಿ ಮಾಡಿದ್ದೇವೆ. ಇದರ ಜತೆಗೆ ಇತರ ಬೇಡಿಕೆಗಳನ್ನೂ ಮುಂದಿಟ್ಟಿದ್ದೇವೆ. ನಮ್ಮ ಬೇಡಿಕೆಗಳ ಪಟ್ಟಿಯನ್ನು ಅವರಿಗೆ ನೀಡಿದ್ದು, ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ನಾಳೆ ಮುಖ್ಯಮಂತ್ರಿ ಅವರೊಂದಿಗೆ ಮಾತನಾಡುವುದಾಗಿ ತಿಳಿಸಿರುವುದಾಗಿ ಎಂದು ನಾಗಲಕ್ಷ್ಮಿ ಹೇಳಿದ್ದಾರೆ.
ಸರ್ಕಾರವನ್ನು ಬ್ಲಾಕ್ ಮೇಲ್ ಮಾಡಲು ಆಗುವುದಿಲ್ಲ: ಸಿಎಂ
ಬೆಂಗಳೂರು: "ನಿಮ್ಮ ಸಮಸ್ಯೆಗಳ ಬಗ್ಗೆ ನಮಗೆ ಅರಿವಿದೆ. ನಾವು ಅದಕ್ಕೆ ಸೂಕ್ತ ಪರಿಹಾರ ನೀಡುತ್ತೇವೆ. ಇಂದು ಸಂಜೆ ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ. ನಮ್ಮ ಮೇಲೆ ನಂಬಿಕೆಯನ್ನಿಡಿ. ನಾಡಿನ ಮುಖ್ಯಮಂತ್ರಿಯಾಗಿ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ, ತಾಯಂದಿರಿಗೆ ನಮ್ರತೆಯಿಂದ ವಿನಂತಿಸುತ್ತೇನೆ. ನಿಮ್ಮ ಪ್ರತಿಭಟನೆ ಹಿಂತೆಗೆದುಕೊಳ್ಳಿ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರಿಗೆ ಮತ್ತೊಮ್ಮೆ ಮನವಿ ಮಾಡಿದರು.
ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು.
"ನಾವು ನಿಮ್ಮ ಪರವಾಗಿದ್ದೇವೆ. ಸರ್ಕಾರವನ್ನು ಹೆದರಿಸಬೇಡಿ. ಆಶಾ ಕಾರ್ಯಕರ್ತೆಯರು ಮೊದಲು ಪ್ರತಿಷ್ಠೆಯನ್ನು ಬಿಡಬೇಕು. ಬೇರೆಯವರು ನಿಮ್ಮನ್ನು ತಮ್ಮ ರಾಜಕಾರಣಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಅವರು ನಿಮಗೆ ಯಾವುದೇ ಸಹಾಯ ಮಾಡುವುದಿಲ್ಲ. ಇದರಲ್ಲಿ ಬಹಳ ಗಂಭೀರ ವಿಚಾರಗಳೂ ಇವೆ. ಆಶಾಕಾರ್ಯಕರ್ತರು ಒಬ್ಬರೆ ಅಲ್ಲ, ಈ ರೀತಿ ಪ್ರತಿಭಟನೆ ಮಾಡಲು ಹಲವು ಮಂದಿ ಸಿದ್ಧರಾಗುತ್ತಿದ್ದಾರೆ" ಎಂದರು.