Laxmi Hebbalkar: ಒಂದು ವಾರದಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ: ಲಕ್ಷ್ಮಿ ಹೆಬ್ಬಾಳ್ಕರ್
Laxmi Hebbalkar: ಕರ್ನಾಟಕದಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೇರಲು ಸಾಧ್ಯವಾಗದ ಬಿಜೆಪಿ ನಾಯಕರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.


ಬೆಳಗಾವಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನ ಸಾಮಾನ್ಯರ ಪಾಲಿಗೆ ಹೊರೆಯಾಗುತ್ತಿದೆ. ಕೇಂದ್ರದ ವಿರುದ್ಧ ಮಾತನಾಡಲು ಆಗದ ರಾಜ್ಯ ಬಿಜೆಪಿ ನಾಯಕರು, ಜನಪರವಾಗಿರುವ ನಮ್ಮ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಕಿಡಿಕಾರಿದರು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ ಕೇಂದ್ರ ಸರ್ಕಾರದ ವಿರುದ್ಧದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದ್ದಾರೆ.
ಕರ್ನಾಟಕದಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೇರಲು ಸಾಧ್ಯವಾಗದ ಬಿಜೆಪಿ ನಾಯಕರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಇದುವರೆಗೂ 80 ಸಾವಿರ ಕೋಟಿ ಹಣ ಜನರ ಜೇಬಿಗೆ
ಮುಂದಿನ ತಿಂಗಳು 20 ನೇ ತಾರೀಖಿಗೆ ನಮ್ಮ ಸರ್ಕಾರ ಅಧಿಕಾರ ಬಂದು 2 ವರ್ಷ ಪೂರೈಸುತ್ತಿದೆ. ಈವರೆಗೆ 80 ಸಾವಿರ ಕೋಟಿ ರೂಪಾಯಿಗಳಷ್ಟು ಹಣವನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಜನರ ಜೇಬಿಗೆ ಹಾಕಿದ್ದೇವೆ. ಇದು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜನಸಾಮಾನ್ಯರ ಮೇಲಿರುವ ಬದ್ಧತೆ ಎಂದು ಹೇಳಿದರು.
2023ರಲ್ಲಿ ಜನರ ವಿಶ್ವಾಸ ಗಳಿಸಿ ಕರ್ನಾಟದಲ್ಲಿ 136 ಸ್ಥಾನಗಳನ್ನು ಗೆದ್ದು ಅಧಿಕಾರದಲ್ಲಿದ್ದೇವೆ. ಸರ್ಕಾರ ಬಂದು 100 ದಿನಗಳ ಒಳಗೆ ಕೊಟ್ಟ ಮಾತಿನಂತೆ 5 ಗ್ಯಾರಂಟಿಗಳನ್ನು ಮನೆ ಬಾಗಿಲಿಗೆ ತಂದಿದ್ದೇವೆ. 136 ಸ್ಥಾನ ಗೆದ್ದರೂ ರಾಜ್ಯ ಸರ್ಕಾರ ಉಳಿಯುವುದಿಲ್ಲ, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಬರಲು ಸಾಧ್ಯವಿಲ್ಲ ಅಂತ ಬಿಜೆಪಿಗರು ಹೇಳುತ್ತಿದ್ದರು. ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆಯುತ್ತಿದೆ ಎಂದು ತಿಳಿಸಿದರು.
ಕರ್ನಾಟಕದ ಇತಿಹಾಸದಲ್ಲೇ ಎಂದೂ ಕಾಣದಂತಹ ಹಲವಾರು ಯೋಜನೆಗಳ ಮೂಲಕ, ಅಭಿವೃದ್ಧಿಯ ಮೂಲಕ ನಮ್ಮ ಸರ್ಕಾರ ಇಂದು ಜನರ ಪ್ರೀತಿ, ವಿಶ್ವಾಸ ಗಳಿಸಿದೆ. ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಕುಟುಂಬಕ್ಕೆ ತಿಂಗಳಿಗೆ ಸುಮಾರು 4-5 ಸಾವಿರ ರೂಪಾಯಿ ಲಾಭ ಮಾಡಿಕೊಡಲಾಗುತ್ತಿದೆ. ತನ್ಮೂಲಕ ಕುಟುಂಬಗಳ ಆರ್ಥಿಕ ಶಕ್ತಿಯನ್ನು, ಖರೀದಿ ಸಾಮರ್ಥ್ಯವನ್ನು ಹೆಚ್ಚಿಸಿದೆ ಎಂದರು.
ಬಿಜೆಪಿ ನಾಯಕರು ತಮ್ಮಲ್ಲಿ ನಡೆಯುತ್ತಿರುವ ಒಳಬೇಗುದಿ, ಕುರ್ಚಿ ಕಾದಾಟವನ್ನು ನೋಡಿ ಜನರೇ ಬೈಯುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರ ದಿಕ್ಕನ್ನು ತಪ್ಪಿಸುವ ಸಲುವಾಗಿ ಜನಾಕ್ರೋಶ ಅಂತ ಮಾಡಿದರು. ಆದರೆ, ಅವರಿಗೆ ಕರ್ನಾಟಕ ಪೂರ್ತಿ ಜನಾಕ್ರೋಶ ರ‍್ಯಾಲಿ ಮಾಡಲು ಮುಖ ಇರಲಿಲ್ಲ. ಅವರು ಜನಾಕ್ರೋಶ ಮಾಡಲು ಹೋರಟಾಗಲೇ ಕೇಂದ್ರ ಸರ್ಕಾರ ಸಿಲಿಂಡೆರ್‌ಗೆ 50 ರೂಪಾಯಿ ಏರಿಕೆ ಮಾಡಿತು ಎಂದು ದೂರಿದರು.
ರಾಜ್ಯದಲ್ಲಿ ಎಂದೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಾಗದ ಬಿಜೆಪಿಯವರು ಈಗ ಕೆಲಸವಿಲ್ಲದೆ ಖಾಲಿ ಕುಳಿತಿದ್ದಾರೆ. ಕಾರ್ಯಕರ್ತರ ದಿಕ್ಕು ತಪ್ಪಿಸುವ ಸಲುವಾಗಿ ನಮ್ಮ ಸರ್ಕಾರದ ವಿರುದ್ಧ ಬೆಲೆ ಏರಿಕೆ ಆರೋಪ ಹೊರಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈಗ ನಿಜವಾಗಿಯೂ ಜನಾಕ್ರೋಶವಿರುವುದು ಬಿಜೆಪಿಯ ಮೇಲೆ, ಕೇಂದ್ರದ ಬಿಜೆಪಿ ಸರ್ಕಾರದ ಮೇಲೆ, ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಕೆಲಸ ಮಾಡಿ ಎಂದು ಜನರು ಇವರನ್ನು ಕಳಿಸಿದರೆ ಅವರಿಗೆ ಆಂತರಿಕ ಕಚ್ಚಾಟದಿಂದ ಹೊರಗೆ ಬರಲಾಗುತ್ತಿಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದರು.
ಜವಾಬ್ದಾರಿಯುತ ವಿರೋಧ ಪಕ್ಷವಾಗಿ ರಚನಾತ್ಮಕ ಟೀಕೆ ಮಾಡುವ ಬದಲು ಕೇವಲ ಸುಳ್ಳನ್ನೇ ಹೇಳುತ್ತ, ಒಂದೇ ಸುಳ್ಳನ್ನು 10 ಬಾರಿ ಹೇಳುವ ಮೂಲಕ ಅದೇ ಸತ್ಯ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ರಾಜ್ಯದ ಜನರು ಮೂರ್ಖರಲ್ಲ, ಇವರ ಬಂಡವಾಳ ಗೊತ್ತಾಗಿದೆ. ಹಾಗಾಗಿ ಈಗ ಬಿಜೆಪಿ ಮೇಲೆ, ಕೇಂದ್ರದ ಬಿಜೆಪಿ ಸರ್ಕಾರದ ಮೇಲೆ ಕಿಡಿ ಕಾರುತ್ತಿದ್ದಾರೆ ಎಂದರು.
ಈ ಸುದ್ದಿಯನ್ನೂ ಓದಿ | CM Siddaramaiah: ಬಿಜೆಪಿ-ಆರ್‌ಎಸ್‌ಎಸ್ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗಲ್ಲ-ಬಗ್ಗಲ್ಲ- ಸಿದ್ದರಾಮಯ್ಯ
ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ
ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭರವಸೆ ನೀಡಿದ್ದಾರೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ವ್ಯಕ್ತಿ ನಮ್ಮ ಮುಖ್ಯಮಂತ್ರಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.