ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Laxmi Hebbalkar: ಬೆಲೆ ಏರಿಕೆ- ಕೇಂದ್ರ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ಸಮಾವೇಶ: ಲಕ್ಷ್ಮೀ ಹೆಬ್ಬಾಳ್ಕರ್‌

Laxmi Hebbalkar: ಕೇಂದ್ರ ಸರ್ಕಾರ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ದರವನ್ನು ಏರಿಕೆ ಮಾಡಿ, ಬಡವರ ರಕ್ತ ಹೀರುವ ಕೆಲಸ ಮಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ: ಹೆಬ್ಬಾಳ್ಕರ್‌

Profile Siddalinga Swamy Apr 22, 2025 7:13 PM

ಬೆಳಗಾವಿ: ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಪಾಲಿಗೆ ಹೊರೆಯಾಗುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಚಿಕ್ಕೋಡಿ ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಏಪ್ರಿಲ್ 27 ಅಥವಾ 28 ರಂದು ಬೃಹತ್ ಪ್ರತಿಭಟನೆ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌ (Laxmi Hebbalkar) ತಿಳಿಸಿದರು. ಮಂಗಳವಾರ ಈ ಸಂಬಂಧ ನಡೆದ ಪೂರ್ವಭಾವಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಅಗತ್ಯ ವಸ್ತುಗಳ ಬೆಲೆ ಏರಿಕೆ, ನ್ಯಾಷನಲ್ ಹೆರಾಲ್ಡ್ ಪ್ರಕರಣ ಕುರಿತು ಕೇಂದ್ರದ ನೀತಿ ವಿರುದ್ಧ ಪ್ರತಿಭಟಿಸಲಾಗುವುದು ಎಂದರು.

ಕೇಂದ್ರ ಸರ್ಕಾರ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ದರವನ್ನು ಏರಿಕೆ ಮಾಡಿ, ಬಡವರ ರಕ್ತ ಹೀರುವ ಕೆಲಸ ಮಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು.

ಬಿಜೆಪಿ ನಾಯಕರು ತಮ್ಮ ಒಳಬೇಗುದಿಯನ್ನು ಮರೆಯಾಚಿಸುವ ಸಲುವಾಗಿ ರಾಜ್ಯ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ಹುಟ್ಟಿಕೊಂಡಿದ್ದೇ ಬೆಲೆ ಏರಿಕೆಯ ಕಾರಣದಿಂದ, ಗ್ಯಾರಂಟಿ ಯೋಜನೆಗಳಿಂದ ಬೆಲೆ ಏರಿಕೆಯಾಗುತ್ತಿದೆ ಎನ್ನುತ್ತಿರುವುದು ಶುದ್ಧ ಸುಳ್ಳು. ಬಿಜೆಪಿ ನಾಯಕರ ನಡುವಿನ ಆಂತರಿಕ ಕಚ್ಚಾಟವನ್ನು ಮರೆಮಾಚಲು ಜನರ ದಾರಿ ತಪ್ಪಿಸುವ ಸಲುವಾಗಿ ಜನಾಕ್ರೋಶ ಯಾತ್ರೆ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು.

ತನಿಖೆ ಹೆಸರಿನಲ್ಲಿ ರಾಷ್ಟ್ರೀಯ ನಾಯಕರಿಗೆ ಕಿರುಕುಳ

ಕಾಂಗ್ರೆಸ್ ನಾಯಕರ ಧ್ವನಿಯನ್ನು ದಮನ ಮಾಡುವ ಉದ್ದೇಶದಿಂದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪಕ್ಷದ ಮುಖಂಡರ ಮೇಲೆ ಚಾರ್ಜ್ ಶೀಟ್ ಹಾಕಲಾಗಿದೆ. ಇದರ ಬಗ್ಗೆ ಸತ್ಯಾಸತ್ಯತೆಯನ್ನು ಎಲ್ಲರೂ ಪರಿಶೀಲನೆ ಮಾಡಬೇಕು. ಬಿಜೆಪಿಯವರು ನ್ಯಾಷನಲ್ ಹೆರಾಲ್ಡ್ ಆಸ್ತಿ 5 ಸಾವಿರ ಕೋಟಿ ಇದೆ ಅಂತಾರೆ. ಆದರೆ ಐಟಿಯವರೇ 359 ಕೋಟಿ ಅಂತಾ ಹೇಳುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸುಳ್ಳುಗಳನ್ನು ಸತ್ಯ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಯಾಕೆ ತರಲಾಯಿತು ಅನ್ನೋದನ್ನ ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಜನರ ದಾರಿ ತಪ್ಪಿಸುವುದೇ ಬಿಜೆಪಿಯವರ ಕೆಲಸ. ಜನ ಸಾಮಾನ್ಯರ ಬದಲಿಗೆ ಕೇಂದ್ರ ಸರ್ಕಾರ ಅಂದಾನಿ, ಅಂಬಾನಿಯವರಿಗಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಆರೋಪಿಸಿದರು.

ರಾಷ್ಟ್ರೀಯ ನಾಯಕರು ಪ್ರತಿಭಟನೆಯಲ್ಲಿ ಭಾಗಿ

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೆವಾಲಾ, ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ರಾಷ್ಟ್ರೀಯ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌ ಮಾಹಿತಿ ನೀಡಿದರು.

ಈ ಸುದ್ದಿಯನ್ನೂ ಓದಿ | CM Siddaramaiah: ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ: ಸಿದ್ದರಾಮಯ್ಯ

ನಗರದ ಸಿಪಿಎಡ್ ಮೈದಾನದಲ್ಲಿ ಪ್ರತಿಭಟನೆ ನಡೆಯಲಿದೆ. ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರ ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.