Deepavali 2026: ದೀಪಾವಳಿ ಹಬ್ಬದಂದು 2 ಗಂಟೆ ಮಾತ್ರ ಪಟಾಕಿ ಸಿಡಿಸಲು ಅವಕಾಶ; ರಾಜ್ಯ ಸರ್ಕಾರರಿಂದ ಕಠಿಣ ಮಾರ್ಗಸೂಚಿ
Deepavali cracker restrictions: 2026ರ ದೀಪಾವಳಿ ಹಬ್ಬದ ದಿನಗಳಂದು ಪಟಾಕಿಗಳಿಂದಾಗುವ ಶಬ್ದ ಮತ್ತು ವಾಯು ಮಾಲಿನ್ಯವನ್ನು ನಿಯಂತ್ರಿಸಲು ಅಧಿಕಾರಿಗಳು ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಕ್ರಮ ಜರುಗಿಸಬೇಕು ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ ನೀಡಿದ್ದಾರೆ. ನಿಯಮ ಮೀರಿದರೆ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
-
ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ (Deepavali 2026) ಅನ್ನು ಪ್ರತಿ ವರ್ಷದಂತೆ ಈ ವರ್ಷವು ಸಹ ರಾಜ್ಯಾದ್ಯಂತ ನ.8 ರಿಂದ 10ರವರೆಗೆ ಆಚರಿಸಲಾಗುತ್ತಿದೆ. ಹೀಗಾಗಿ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಹಬ್ಬದ ದಿನಗಳಂದು ನಿಗದಿಪಡಿಸಿರುವ ಸಮಯ ಹೊರತುಪಡಿಸಿ ಉಳಿದ ಸಮಯದಲ್ಲಿ ಪಟಾಕಿ (crackers) ಸಿಡಿಸುವುದನ್ನು ರಾಜ್ಯ ಸರ್ಕಾರ ನಿಷೇಧಿಸಿದೆ. ಈ ಸಂಬಂಧ ಕಠಿಣ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ.
ರಾಜ್ಯ ಸರ್ಕಾರದ ಆದೇಶ ಪಾಲನೆಗೆ ಸೂಕ್ತ ಕ್ರಮ ಜರುಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚಿಸಿದ್ದಾರೆ. ಹಬ್ಬದ ಸಂದರ್ಭದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯದಿಂದ ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮವಾಗುವುದು ನಮ್ಮೆಲ್ಲರಿಗೂ ತಿಳಿದ ವಿಷಯವಾಗಿದೆ.
2026ರ ದೀಪಾವಳಿ ಹಬ್ಬದ ದಿನಗಳಂದು ಪಟಾಕಿಗಳಿಂದಾಗುವ ಶಬ್ದ ಮತ್ತು ವಾಯು ಮಾಲಿನ್ಯವನ್ನು ನಿಯಂತ್ರಿಸಲು ಅಧಿಕಾರಿಗಳು ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಕ್ರಮ ಜರುಗಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.
ಮಾರ್ಗಸೂಚಿಯಲ್ಲಿ ಏನಿದೆ?
- ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಜಿಲ್ಲಾಧಿಕಾರಿಗಳು, ಪೋಲಿಸ್ ವರಿಷ್ಠಾಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯ ಎಲ್ಲಾ ಅಧೀನ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಆದೇಶ ಪಾಲನೆಗೆ ಸೂಕ್ತ ಕ್ರಮ ಜರುಗಿಸುವಂತೆ ಸೂಚಿಸುವುದು.
- ಆಯಾಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಜಿಲ್ಲಾ ಅಗ್ನಿಶಾಮಕ ಪಡೆ ಅಧಿಕಾರಿ, ಸ್ಥಳೀಯ ಸಂಸ್ಥೆಯ ಆರೋಗ್ಯಾಧಿಕಾರಿಗಳು, ತಹಶೀಲ್ದಾರರು, ಜಿಲ್ಲಾ ಪರಿಸರ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಆಸಕ್ತ ನಾಗರೀಕರು ಹಾಗೂ ಸ್ಥಳೀಯ ಸರ್ಕಾರೇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ಕಾರ್ಯಪಡೆಗಳನ್ನು ರಚಿಸಿ, ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು ಹಾಗೂ ಅಲ್ಲಿ ಹಸಿರು ಪಟಾಕಿಯಲ್ಲದೆ, ಇನ್ನಾವುದಾದರೂ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ, ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಬೇಕು.
- ಎಲ್ಲಾ ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆಯಿರುತ್ತದೆ ಹಾಗೂ ಕ್ಯೂ.ಆರ್.ಕೋಡ್ ಸಹಾ ಇರುತ್ತದೆ, ಸದರಿ ಚಿಹ್ನೆಯ ಬಗ್ಗೆ ಸಂಬಂಧಪಟ್ಟ ಜಿಲ್ಲೆಯ ಪರಿಸರ ಅಧಿಕಾರಿಗಳಿಂದ ಖಚಿತ ಪಡಿಸಿಕೊಳ್ಳುವುದು. ಸದರಿ ಚಿಹ್ನೆ ಇಲ್ಲದ ಯಾವುದೇ ಪಟಾಕಿ ಹಸಿರು ಪಟಾಕಿಯೆನಿಸುವುದಿಲ್ಲ ಮತ್ತು ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು.
- ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗೂ ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗು ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು.
- ಯಾವುದೇ ಸ್ಥಳೀಯ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಹಾಗೂ ಇನ್ನಾವುದೇ ನಿಷೇಧಿತ ಪ್ರದೇಶದಲ್ಲಿ ಯಾವುದೇ ರೀತಿಯ ಪಟಾಕಿಗಳನ್ನು ಸ್ಫೋಟಿಸುವಂತಿಲ್ಲ ಅಥವಾ ಬಳಸುವಂತಿಲ್ಲ,ಇದನ್ನು ಎಲ್ಲಾ ಸ್ಥಳೀಯ ಸಂಸ್ಥೆ ಹಾಗು ಪೊಲೀಸ್ ಇಲಾಖೆಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕು.
- ಪರಿಸರ ಸ್ನೇಹಿ ದೀಪಾವಳಿ ಹಬ್ಬದ ಕುರಿತು ಸಾರ್ವಜನಿಕ ಸ್ಥಳಗಳಾದ ಮೆಟ್ರೋ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಮಾಲ್ಗಳಲ್ಲಿ ಕರಪತ್ರ/ಭಿತ್ತಿಪತ್ರಗಳನ್ನು ಹಂಚುವ ಮೂಲಕ, ವಿಡಿಯೋ ಮತ್ತು ಆಡಿಯೋ ಮುಖಾಂತರ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು.
- ಸ್ಥಳೀಯ ಟಿ.ವಿ ಹಾಗೂ ರೇಡಿಯೋ ಮುಖಾಂತರ ಸಾರ್ವಜನಿಕರಿಗೆ ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸುವ ಬಗ್ಗೆ ಜಾಗೃತಿ ಮೂಡಿಸುವುದು.
- ದೀಪಾವಳಿಯ ಸಮಯದಲ್ಲಿ ಉತ್ಪಾದನೆಯಾಗುವಂತಹ ಘನತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಸೂಕ್ತ ಕ್ರಮ ಜರುಗಿಸಲು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸುವುದು.
- ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಾಟ ಮಾಡುತ್ತಿದ್ದಲ್ಲಿ ಕೂಡಲೆ ವಾಣಿಜ್ಯ ತೆರಿಗೆ ಇಲಾಖೆಯವತಿಯಿಂದ ರಾಜ್ಯದ ಗಡಿಗಳಲ್ಲಿರುವ ತಮ್ಮ ತಮ್ಮ ತನಿಖಾ ಠಾಣೆಗಳ ಮುಖಾಂತರ ನಿಷೇಧಿತ ಪಟಾಕಿಗಳು ಹಾಗು ಸಂಬಂಧಿತ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಹಾಗೂ ಸಾಗಾಟ ಮಾಡುವ ವಾಹನವನ್ನು ಸಾರಿಗೆ ಇಲಾಖೆಯಿಂದ ಮುಟ್ಟುಗೋಲು ಹಾಕಿಕೊಳ್ಳುವುದು. ಇದಕ್ಕೆ ಅವಶ್ಯಕತೆಯಿದ್ದಲ್ಲಿ ಸಂಬಂಧಪಟ್ಟ ಇಲಾಖೆಗಳ ಸಹಯೋಗವನ್ನು ಪಡೆದುಕೊಳ್ಳಬಹುದು.
- ಮೇಲೆ ವಿವರಿಸಿದ ಅಂಶಗಳ ಹಿನ್ನಲೆಯಲ್ಲಿ ಹಾಗೂ ಮಾನ್ಯ ಉಚ್ಚನ್ಯಾಯಾಲಯವು ಪಟಾಕಿಗಳನ್ನು ಸ್ಫೋಟಿಸಲು ನಿಗದಿಪಡಿಸಿರುವ ಸಮಯ ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಮಾತ್ರ ಅವಕಾಶ ನೀಡಿರುವುದರಿಂದ ಉಳಿದ ಸಮಯದಲ್ಲಿ ಪಟಾಕಿಗಳ ಸ್ಫೋಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.